

ಪಿರಿಯಾಪಟ್ಟಣ : ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ತಾಲೂಕು ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ರೈತ ಸಂಘದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲೀಲಾವತಿ ಮಾತನಾಡಿ, ಅಕ್ಷರ ದಾಸೋಹ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಐಸಿಡಿಎಸ್ ಯೋಜನೆಗಳಲ್ಲಿ ದುಡಿಯುತ್ತಿರುವವರನ್ನು ಕಾಯಂ ಮಾಡುವ ಮೂಲಕ ಅವರ ಹಕ್ಕುಗಳನ್ನು ಗೌರವಿಸಬೇಕು. ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ನೀಡಿ ನೌಕರರು ಎಂದು ಪರಿಗಣಿಸಬೇಕು. ಅಂಗನವಾಡಿ ನೌಕರರು ಮತ್ತು ಸಿಬ್ಬಂದಿಗೆ 31 ಸಾವಿರ ರೂ.ವೇತನ ಜಾರಿ ಮಾಡಬೇಕು, ನಿವೃತ್ತಿ ನಂತರ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಸಲ್ಲಿಸಿದರು. ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕೆ.ಪಿ.ಕಾವೇರಮ್ಮ, ರೈತ ಸಂಘದ ಅಧ್ಯಕ್ಷ ಸ್ವಾಮಿಗೌಡ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದೇಗೌಡ ಇತರರು ಹಾಜರಿದ್ದರು.