ವೇತನ ಹೆಚ್ಚಳಕ್ಕೆ ಒತ್ತಾಯ: ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ಮಂಡ್ಯ ನಗರದಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಂಡ್ಯ ನಗರದಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ
  • ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಕೆ
ಮಂಡ್ಯ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಕೊಟ್ಟ ಆಶ್ವಾಸನೆಯಂತೆ ಬಿಸಿಯೂಟ ಕಾರ್ಮಿಕರಿಗೆ 7 ಸಾವಿರ ರೂ ವೇತನ ಹೆಚ್ಚಳ ಆಗಬೇಕು. ಈಗಾಗಲೇ ಕೆಲಸ ಮಾಡುತ್ತಿರುವ 6 ಗಂಟೆ ಕೆಲಸದ ಅವಧಿಯ ಸುತ್ತೋಲೆ ಹೊರಡಿಸಬೇಕು. ಆರೋಗ್ಯ ವಿಮೆ ಜಾರಿ ಮಾಡಬೇಕು. ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್‌ಡಿಎಂಸಿಗೆ ವರ್ಗಾವಣೆ ಮಾಡಿರುವ ಕ್ರಮ ವಾಪಸಾಗಬೇಕು. ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು ಎಂದು ಒತ್ತಾಯಿಸಿದರು.
ಕೆಪಿಎಸ್ ಶಾಲೆ, ಇಸ್ಕಾನ್, ಮಠ, ಇನ್ನಿತರ ಸಂಘ ಸಂಸ್ಥೆಗಳ ಬಿಸಿಯೂಟ ನೌಕರರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಕೆಲಸದ ಭದ್ರತೆ ಒದಗಿಸಬೇಕು. ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು. ಮಾಸಿಕ ಪಿಂಚಣಿ 10 ಸಾವಿರ ರೂ ಕೊಡಬೇಕು. ಎಲ್ಲ ಜಿಲ್ಲೆಗಳಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ ಇಡಿಗಂಟು ತಕ್ಷಣ ಜಾರಿ ಮಾಡಬೇಕು. ಅಡುಗೆ ಕೇಂದ್ರಗಳು ಸುಸಜ್ಜಿತವಾಗಿ ಇಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸಬೇಕು ಹಾಗೂ ಕ್ರಿಮಿ ಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತ ಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.
ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯದ ಹೈಕೋರ್ಟ್ ತೀರ್ಮಾನಿಸಿದಂತೆ 12 ತಿಂಗಳು ಕೆಲಸ ಮತ್ತು ಕನಿಷ್ಟ ಕೂಲಿ ಜಾರಿ ಆಗಬೇಕು. ಅಕ್ಷರ ದಾಸೋಹ ನಡೆಯಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ಬೇಸಿಗೆ ಮತ್ತು ದಸರಾ ರಜೆಗಳ ಮತ್ತು ಚುನಾವಣಾ ಸಂದರ್ಭದಲ್ಲಿ ವೇತನವನ್ನು ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸಿದರು.
ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಟ ಎರಡು ಜನ ಅಡುಗೆಯವರು ಇರಲೇಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂ ಪರಿಹಾರ ಕೊಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ, ಕಾರ್ಯದರ್ಶಿ ಎ.ಬಿ.ಶಶಿಕಲಾ, ಖಜಾಂಚಿ ಭಾಗ್ಯ, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಲಲಿತಾ, ಸಿ.ಕುಮಾರಿ, ಪುಟ್ಟಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net