ಸುಗಮ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ಮಾಹಿತಿ ನೀಡಿದರು.
Published on
ಕೆ.ಆರ್.ಪೇಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ.18ರಿಂದ ಏ.2ರವರೆಗೆ ನಡೆಯಲಿದ್ದು, ಸುಗಮ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ತಿಳಿಸಿದರು.
ಬೆಳಗ್ಗೆ 10ರಿಂದ ಮಧ್ಯಾಹ್ನ 1.25ರವರೆಗೆ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಪಿಎಸ್, ಕಿಕ್ಕೇರಿಯ ಕೆಪಿಎಸ್ ಶಾಲೆ, ಅಕ್ಕಿಹೆಬ್ಬಾಳು, ಬೂಕನಕೆರೆ ಮತ್ತು ಸಂತೇಬಾಚಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು 6 ಪರೀಕ್ಷಾ ಕೆಂದ್ರಗಳನ್ನು ತೆರೆಯಲಾಗಿದೆ. ಒಟ್ಟು 2626 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತಾಲೂಕಿನ ಎಲ್ಲ ಪರೀಕ್ಷಾ ಕೆಂದ್ರಗಳಲ್ಲೂ ಸಿಸಿ ಟಿವಿ ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೆಂದ್ರಕ್ಕೆ ಇಬ್ಬರು ಸ್ಥಾನಿಕ ಜಾಗೃತ ದಳ ಸಿಬ್ಬಂದಿ ಹಾಗೂ ಅನ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾಲೂಕು ಹಂತದಲ್ಲಿ ತಹಸೀಲ್ದಾರರು, ತಾಪಂ ಇಒ ಮತ್ತು ಕ್ಷೇತ್ರ ಶಿಕ್ಷಣಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣಾ ದಳ ರಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಆರಕ್ಷಕ ಸಿಬ್ಬಂದಿ ಹಾಗೂ ಮಕ್ಕಳ ಆರೋಗ್ಯ ಕಾಳಜಿಗಾಗಿ ಶುಶ್ರೂಷಕರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಡಿಜಿಟಲ್/ಸ್ಮಾರ್ಟ್ ಕೈ ಗಡಿಯಾರಗಳನ್ನು ಧರಿಸುವಂತಿಲ್ಲ. ಸೂಕ್ತ ಪೀಠೋಪಕರಣ, ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಸೇರಿದಂತೆ ಮೂಲಸೌಲಭ್ಯವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಗೋಡೆಗೆ ಅಭಿಮುಖವಾಗಿ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಯಾವುದೇ ಆತಂಕಪಡದೆ ಧೈರ್ಯದಿಂದ ಪರೀಕ್ಷೆಗಳನ್ನು ಬರೆದು ಯಶಸ್ವಿಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ಹಾರೈಸಿದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಂಯೋಜಕ ಮಂಜುನಾಥ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net