ಮೌಢ್ಯ, ಜಾತಿ ವ್ಯವಸ್ಥೆ ಹೋಗಲಾಡಿಸಬೇಕಿದೆ: ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಕರೆ

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಉದ್ಘಾಟಿಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಂಬಿಗರ ಚೌಡಯ್ಯ ಜಯಂತಿ
  • ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜನೆ
  • ಎಡಿಸಿ ಸೇರಿದಂತೆ ಹಲವರು ಭಾಗಿ
ಮಂಡ್ಯ: ಸಮಾಜದಲ್ಲಿನ ಮೂಢನಂಬಿಕೆ, ಮೌಢ್ಯ ಮತ್ತು ಜಾತೀಯತೆಯನ್ನು ಹೋಗಲಾಡಿಸಿ ಮಾನವೀಯತೆಯ ಕಡೆಗೆ ಸಮಾಜ ಸಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯ ಅವರು ಮೂಢನಂಬಿಕೆ, ಜಾತಿ ವ್ಯವಸ್ಥೆ ಮತ್ತು ಮೌಢ್ಯತೆಯ ವಿರುದ್ಧ ವಚನಗಳ ಮೂಲಕ ಸಮರ ಸಾರಿದವರು. 247 ವಚನಗಳನ್ನು ರಚಿಸುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡಿದ್ದಾರೆ ಎಂದರು.
12ನೇ ಶತಮಾನದಲ್ಲಿ ಅಂಬಿಗರ ಚೌಡಯ್ಯ ಅವರು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಬೇಕು ಎಂಬ ಉದ್ದೇಶದಿಂದ ಹಲವು ಸಂದೇಶ ಮತ್ತು ವಚನಗಳನ್ನು ನೀಡಿದ್ದಾರೆ. ಅಂಬಿಗರ ಚೌಡಯ್ಯ ಜಯಂತಿಯನ್ನು ಶಾಲಾ-ಕಾಲೇಜು ಮಟ್ಟದಲ್ಲಿ ಮಾಡಬೇಕು. ಯುವಜನತೆ ಅಂಬಿಗರ ಚೌಡಯ್ಯ ಅವರ ನಡೆ-ನುಡಿ ಜ್ಞಾನವನ್ನು ಪರಿಪೂರ್ಣವಾಗಿ ಅಳವಡಿಸಿಕೊಳ್ಳಬೇಕು. 12ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಉಳ್ಳವರಾಗಿದ್ದರು. ವೃತ್ತಿಯಿಂದ ಅಂಬಿಗನಾದರು ಪ್ರವೃತ್ತಿಯಲ್ಲಿ ಅನುಭವಿ ವಚನಕಾರರಾಗಿದ್ದರು ಎಂದು ತಿಳಿಸಿದರು.
ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್.ಬಿ.ಶಂಕರೇಗೌಡ ಮಾತನಾಡಿ, ಕಾಯಕ ಮತ್ತು ವ್ಯಕ್ತಿನಾಮದಿಂದ ಅಂಬಿಗರ ಚೌಡಯ್ಯ ಎಂಬುದೇ ಅವರ ವಚನಗಳ ಅಂಕಿತವಾಗಿದೆ. ಅನೇಕ ವಚನಗಳನ್ನು ರಚಿಸುವ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ್ದಾರೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ ಬಿ.ಲಿಂಗಯ್ಯ, ಮಾಜಿ ಸದಸ್ಯ ಈರಯ್ಯ, ವಿವಿಧ ಸಂಘಟನೆಗಳ ಮುಖಂಡರಾದ ಎಲ್.ಸಂದೇಶ್, ಜೆ.ರಾಜಶೇಖರಯ್ಯ, ರಾಷ್ಟ್ರಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ ಇತರರಿದ್ದರು.
ಇದೇ ವೇಳೆ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಮಂಡ್ಯ ತಾಲೂಕಿನ ಮರಡೀಪುರ ಗ್ರಾಮದ ಅಂಬಿಗರ ಚೌಡಯ್ಯ ಸಮುದಾಯದ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಅಂಜನಾ ಅವರನ್ನು ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net