ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಗೋಪಾಲಕೃಷ್ಣ ಚಾಲನೆ ನೀಡಿದರು. ಡಾ.ರವಿಶಂಕರ್, ಎಂ.ಎನ್.ಶಿವಣ್ಣ, ಸುಮಂತ್, ಡಾ.ಬಾಲಕೃಷ್ಣ ಇದ್ದರು.
ಮದ್ದೂರು: ಏಡ್ಸ್ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆಯಿದ್ದು, ಎಚ್‌ಐವಿ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್ ಮನವಿ ಮಾಡಿದರು.
ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹಾಗೂ ವ್ಯಕ್ತಿಗೆ ರಕ್ತ ನೀಡುವಾಗ ರಕ್ತ ಪರೀಕ್ಷೆ ಮಾಡದೆ ನೀಡುವುದು ಸೇರಿದಂತೆ ಹಲವು ವಿಧಾನಗಳಿಂದ ಏಡ್ಸ್ ಬರುವ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ವರ್ಧಮಾನ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ನಗರ ಪ್ರಮುಖ ಬೀದಿಯಲ್ಲಿ ಸಂಚಾರ ಮಾಡಿ ಏಡ್ಸ್ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಥಾ ಕಾರ್ಯಕ್ರಮಕ್ಕೆ ಹಿರಿಯ ನ್ಯಾಯಾಧೀಶ ಗೋಪಾಲಕೃಷ್ಣ ಚಾಲನೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಕಾರ್ಯದರ್ಶಿ ಸುಮಂತ್, ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಾಲಕೃಷ್ಣ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.