ಕಾಂಗ್ರೆಸ್ ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಡಿಸಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರು

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ದೂರು ಸಲ್ಲಿಸಿದರು.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ದೂರು ಸಲ್ಲಿಸಿದರು.
Published on
ಮಂಡ್ಯ: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಯುವ ಕಾಂಗ್ರೆಸ್ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ದೂರು ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಕಾರ್ಯಕರ್ತರು, ಯುವ ಕಾಂಗ್ರೆಸ್ ಹೆಸರಿನಲ್ಲಿ ಕಾರ್ಯಕರ್ತರು ಹೋರಾಟ ಮಾಡಬೇಕೇ ಹೊರತು ವಿದ್ಯಾರ್ಥಿಗಳನ್ನು ಕರೆತಂದು ಪ್ರತಿಭಟನೆ ಮಾಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳು ಇದ್ದಲ್ಲಿ ವಿದ್ಯಾರ್ಥಿ ಸಂಘಟನೆಗಳೇ ಚಳವಳಿ ಮಾಡುತ್ತಾರೆ. ಆದರೆ ಯುವ ಕಾಂಗ್ರೆಸ್ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಸೇರಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ದೂರಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳ ಹೆಸರಿನಲ್ಲಿ ದೇಶದಲ್ಲಿ ಹರಾಜಕತೆ ಸೃಷ್ಠಿ ಮಾಡಲು ಕ್ಷುದ್ರ ಶಕ್ತಿಗಳು ಮುಂದಾಗಿವೆ. ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಶಾಸಕರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಬೃಹತ್ ಹೋರಾಟ ಮಾಡುತ್ತಿದ್ದು, ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಹಲವಾರು ನಿದರ್ಶನಗಳೂ ಇವೆ ಎಂದು ಆರೋಪಿಸಿದರು.
ಧಾರವಾಡದಲ್ಲಿ ವಿದ್ಯಾರ್ಥಿಗಳು ಉದೋಗಕ್ಕಾಗಿ ಪ್ರತಿಭಟನೆ ಮಾಡಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದು ಇದೇ ಕಾಂಗ್ರೆಸ್ ಸರ್ಕಾರ. ರೈತರು ಪ್ರತಿಭಟನೆ ನಡೆಸಿದಾಗ ಅವರ ಮೇಲೆ ಲಾಠಿ ಪ್ರಹಾರ ಮಾಡಿದ್ದೂ ಇದೇ ಸರ್ಕಾರ. ನೀಟ್ ಪರೀಕ್ಷೆಯಲ್ಲಿ ಅಕ್ರಮ ಮಾಡಿರುವವರನ್ನು ಈಗಾಗಲೇ ಬಂಧಿಸಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಂತಹವರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಇಲ್ಲದ ಗೊಂದಲ ಸೃಷ್ಟಿಸಲು ಮುಂದಾಗಿದೆ ಎಂದು ದೂರಿದರು.
ದೆಹಲಿಯಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಜತೆಗೆ ಸೇರಿರುವ ಕೆಲ ಪಟ್ಟಭದ್ರರು ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಪೊಲೀಸರ ಮೇಲೆ ದಾಳಿ ನಡೆಸುತ್ತಾರೆ. ಪತ್ರಕರ್ತರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ್ದಾರೆ. ಶ್ರೀಲಂಕಾ, ನೇಪಾಳ ಮಾದರಿಯಲ್ಲಿ ಸಂಸತ್ತಿಗೆ ನುಗ್ಗಿ ದಾಂದಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡು ಅವರ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾರ್ಯಕರ್ತರಾದ ಹೊಸಹಳ್ಳಿ ಶಿವು, ಯಲ್ಲೇಗೌಡ, ನಾಗರಾಜು, ಆನಂದ್, ವಿನೋಭ, ಶಿವಲಿಂಗಯ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net