ಮಳವಳ್ಳಿ : ಗಣೇಶ ಚತುರ್ಥಿಯನ್ನು ಶಾಂತಿ ಸೌಹಾರ್ದದಿಂದ ಅರ್ಥಪೂರ್ಣವಾಗಿ ಆಚರಿಸುವುದರ ಜತೆಗೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ಎಚ್ಚರ ವಹಿಸಬೇಕು ಎಂದು ಗ್ರಾಮಾಂತರ ಇನ್‌ಸ್ಪೆಕ್ಟರ್ ಬಸವರಾಜು ಸಲಹೆ ನೀಡಿದ್ದಾರೆ.
ಗಣೇಶ ಹಬ್ಬದ ಅಂಗವಾಗಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾರ್ವಜನಿಕರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪೊಲೀಸ್ ಠಾಣೆ, ಸ್ಥಳೀಯ ಸಂಸ್ಥೆ, ವಿದ್ಯುತ್ ಸರಬರಾಜು ಕಂಪನಿ ಹಾಗೂ ಅಗ್ನಿಶಾಮಕ ಠಾಣೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗ ದಂತೆ ಗಣೇಶ ಮಂಟಪಗಳನ್ನು ನಿರ್ಮಿಸಿಕೊಳ್ಳ ಬೇಕೆಂದು ಸಲಹೆ ನೀಡಿದರು.
ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಡಿಜೆ ಸೌಂಡ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಡಿಜೆ ಸೌಂಡ್ ಅನ್ನು ಸೀಜ್ ಮಾಡಲಾಗುವುದು. ಯಾವುದೇ ಧರ್ಮ, ಜಾತಿ ಅಥವಾ ಪಂಥಕ್ಕೆ ಪ್ರಚೋದನೆ ನೀಡುವಂತಹ ಹಾಡುಗಳನ್ನು ಹಾಕುವುದು ಅಥವಾ ಘೋಷಣೆ ಕೂಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದರು
ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಮಂಟಪಗಳಲ್ಲಿ ಭದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ವಿಸರ್ಜನೆ ದಿನಗಳಲ್ಲಿ ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗ ಮತ್ತು ನಿಗದಿತ ಸಮಯದಲ್ಲಿಯೇ ಮೆರವಣಿಗೆ ಮುಗಿಸಿ ಮೂರ್ತಿ ವಿಸರ್ಜನೆ ಮಾಡಬೇಕು ಎಂದು ತಿಳಿಸಿದರು.
ಇದೇ ವೇಳೆ ಸಭೆಯಲ್ಲಿ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಸ್ಥಳೀಯ ಗ್ರಾಮಪಂಚಾಯಿತಿಯಿಂದ ಸಿ.ಸಿ ಕ್ಯಾಮಾರಾ ಹಾಗೂ ವಿಸರ್ಜನೆ ಮಾಡುವ ಸ್ಥಳಗಳಿಗೆ ಬೆಳಕಿನ ವ್ಯವಸ್ಥೆ ಮಾಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗ ಳಿಂದ ಮುಖಂಡರು ಹಾಗೂ ಯುವಕರು ಪಾಲ್ಗೊಂಡಿದ್ದರು.