ಪಿಡಿಒ ಲಭ್ಯತೆಯ ಮಾಹಿತಿ ತಿಳಿಸಿ: ಜಿಪಂ ಸಿಇಒ ಕೆ.ಆರ್.ನಂದಿನಿ ಸೂಚನೆ

ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ
ಮಂಡ್ಯ: ಎರಡು ಗ್ರಾಮ ಪಂಚಾಯಿತಿಯ ಪ್ರಭಾರ ಹೊಂದಿರುವ ಪಿಡಿಒಗಳು ತಾವು ಯಾವ ದಿನ ಯಾವ ಗ್ರಾಪಂನಲ್ಲಿ ಲಭ್ಯವಿರುತ್ತಾರೆ ಎಂಬ ಮಾಹಿತಿಯನ್ನು ಕಚೇರಿಯಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೂಲ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹಾಗೂ ಹೆಚ್ಚುವರಿ ಪ್ರಭಾರ ಹೊಂದಿರುವ ಗ್ರಾ.ಪಂನಲ್ಲಿ ಮಂಗಳವಾರ, ಗುರುವಾರ ಮತ್ತು ಶನಿವಾರ ಹಾಜರಾಗುವಂತೆ ನಿರ್ದೇಶನ ನೀಡಿದರು.
ಗ್ರಾಪಂ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯ ಆ್ಯಪ್ ಮೂಲಕ ಹಾಜರಾತಿ ದಾಖಲಿಸಬೇಕು. ಈ ಸಂಬಂಧ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೆ ಒಂದು ವಾರದೊಳಗೆ ಅವುಗಳನ್ನು ಪರಿಹರಿಸಿಕೊಂಡು ನಿಯಮಿತವಾಗಿ ಹಾಜರಾತಿ ದಾಖಲಿಸಬೇಕು. ಗ್ರಾಪಂಗಳ ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಗ್ರಾಪಂ ಪಿಡಿಒಗಳು ಸಾರ್ವಜನಿಕರಿಂದ ಬರುವ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಿ, ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಸಾರ್ವಜನಿಕರೊಂದಿಗೆ ಸೌಹಾರ್ದ ಸಂಪರ್ಕವನ್ನು ಕಾಯ್ದುಕೊಂಡು ಜನಸ್ನೇಹಿ ಆಡಳಿತ ನೀಡಬೇಕು ಎಂದು ನಿರ್ದೇಶನ ನೀಡಿದರು.
ಪಿಡಿಒ ಸಾರ್ವಜನಿಕರಿಗೆ ಲಭ್ಯವಿಲ್ಲ ಹಾಗೂ ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ ಎಂಬ ಆನೇಕ ದೂರುಗಳು ಜಿಪಂಗೆ ಸ್ವೀಕೃತವಾಗುತ್ತಿವೆ. ಗ್ರಾಪಂ ಅಧಿಕಾರಿ ಮತ್ತು ಸಿಬ್ಬಂದಿ ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದಲ್ಲಿ ಸಾಕಷ್ಟು ಸಮಸ್ಯೆಗಳು ಕ್ಷೇತ್ರ ಮಟ್ಟದಲ್ಲ್ಲಿಯೇ ಬಗೆಹರಿಯುತ್ತವೆ ಎಂದು ತಿಳಿಸಿದರು.
ಕಾರ್ಯ ನಿರ್ವಾಹಣಾಧಿಕಾರಿಗಳು ಪ್ರತಿ ವಾರ ಕಡ್ಡಾಯವಾಗಿ ಗ್ರಾಪಂಗೆ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಿ ವರದಿ ಸಲ್ಲಿಸಬೇಕು. ಈ ಕಾರ್ಯದ ಪ್ರಗತಿಯನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿ ವಾರ ಪರಿಶೀಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಹಾಯಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳು ಸಹ ಪ್ರತೀ ವಾರ ಕನಿಷ್ಠ ಒಂದು ಗ್ರಾಪಂಗೆ ಭೇಟಿ ನೀಡಿ, ವರದಿ ಸಲ್ಲಿಸಬೇಕು. ಗರ್ಭ ಕಂಠ ಕ್ಯಾನ್ಸರ್ ತಡೆಗೆ 14 ರಿಂದ 15.5 ವಯೋಮಾನದ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ವ್ಯಾಪಕ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ಕುರಿತು ಅಗತ್ಯ ಪ್ರಚಾರ ಸಾಮಗ್ರಿಯನ್ನು ಎಲ್ಲ ಗ್ರಾಪಂಗೆ ಒದಗಿಸಲಾಗುವುದು. ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ಸೇವಾ ಮನೋಭಾವಕ್ಕೆ ಆದ್ಯತೆ ನೀಡುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ(ಆಡಳಿತ) ಡಾ.ಶಿವಲಿಂಗಯ್ಯ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಲಕ್ಷ್ಮೀ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್ ನಾಯಕ್, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಆರ್‌ಸಿಎಚ್ ಅಧಿಕಾರಿ ಡಾ.ಆಶಾಲತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net