ಜನರಿಗಾಗಿ ಬದುಕಿದ್ದ ನಾಯಕ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ ಬಣ್ಣನೆ

ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮ
  • ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜನೆ

ಮಂಡ್ಯ:

ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರು ಜನರಿಗಾಗಿ ಬದುಕಿದ್ದ ಮಹಾನ್ ನಾಯಕರು. ಅವರ ಆದರ್ಶ, ಚಿಂತನೆ ಹಾಗೂ ಜನಪರ ಕಾರ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ನ್ಯಾಯ, ಶೈಕ್ಷಣಿಕ ಪ್ರಗತಿ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ದೇವರಾಜ ಅರಸು ಅವರು ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೂರದೃಷ್ಟಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸುವ ಮೂಲಕ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದರು ಎಂದರು.
ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳು ಅನ್ನ, ಅಕ್ಷರ ಹಾಗೂ ಆಶ್ರಯ ಒದಗಿಸುವ ಮೂಲಕ ಅವರ ಭವಿಷ್ಯ ರೂಪಿಸುವ ಪ್ರಮುಖ ಕೇಂದ್ರಗಳಾಗಿವೆ. ವಿದ್ಯಾರ್ಥಿಗಳು ತಂದೆ-ತಾಯಿಗಳ ಕನಸು ನನಸು ಮಾಡುವುದರೊಂದಿಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಾಧಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.
ದೇವರಾಜ ಅರಸು ಅವರ ಪ್ರಮುಖ ಸಾಧನೆಗಳಲ್ಲಿ ಭೂ ಸುಧಾರಣಾ ಕಾಯ್ದೆಗೆ ವಿಶೇಷ ಸ್ಥಾನವಿದೆ. ಉಳುವವನೇ ಭೂಮಿಯ ಒಡೆಯ ಎಂಬ ತತ್ವವನ್ನು ಜಾರಿಗೊಳಿಸುವ ಮೂಲಕ ಭೂಮಿಯಲ್ಲಿ ದುಡಿಯುತ್ತಿದ್ದ ರೈತರನ್ನೇ ಭೂ ಮಾಲೀಕರನ್ನಾಗಿ ಮಾಡಿದ ಐತಿಹಾಸಿಕ ಬದಲಾವಣೆಗೆ ಅವರು ಕಾರಣರಾದರು. ಶೋಷಿತರು, ದೀನದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಸಮಾಜದ ಮುಖ್ಯವಾಹಿನಿಗೆ ಬರಲು ಈ ಕಾಯಿದೆ ಮಹತ್ವದ ಬದಲಾವಣೆಗೆ ಕಾರಣವಾಯಿತು ಎಂದರು.
ರೈತರಿಗೆ ತಾತ್ಕಾಲಿಕ ನೆರವು ನೀಡುವುದಕ್ಕಿಂತ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲಗೊಳಿಸುವ ದೂರದೃಷ್ಟಿ ಭೂ ಸುಧಾರಣಾ ಕಾಯಿದೆಯಲ್ಲಿತ್ತು. ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಈ ಕಾಯಿದೆ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.
ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಮಾಧ್ಯಮ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶೈಲೇಶ್ ರಾಜೇ ಅರಸ್ ಮಾತನಾಡಿ, ದೇವರಾಜ ಅರಸು ಅವರು 1941ರಲ್ಲಿ ಪ್ರಜಾಪ್ರತಿನಿಧಿ ಸಭೆಯ ಮೂಲಕ ರಾಜಕೀಯ ಪ್ರವೇಶಿಸಿದರು. ಸ್ವಾತಂತ್ರ್ಯ ನಂತರ 1951ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ತಮ್ಮ ರಾಜಕೀಯ ಪಯಣವನ್ನು ಮುಂದುವರಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಆರಂಭವಾದ ಸಾಮಾಜಿಕ ಸುಧಾರಣೆಯ ಪರಂಪರೆಯನ್ನು ಸ್ವಾತಂತ್ರ್ಯಾನಂತರ ಅರಸು ಅವರು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿದರು ಎಂದು ವಿವರಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಾಗೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಮುಖಂಡರಾದ ನಟರಾಜ್, ಅಮ್ಜದ್ ಪಾಷಾ, ಅಂಜನಪ್ಪ ಇತರರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಡಿ. ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಡಿಸಿ ಕಚೇರಿ ಎದುರು ಜಿಪಂ ಸಿಇಒ ಕೆ.ಆರ್.ನಂದಿನಿ ಚಾಲನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net