ಮಂಡ್ಯ: ಇ-ಪೌತಿ ಖಾತೆ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಅಭಿನಂದಿಸಿದರು.
ಪೌತಿ ಖಾತೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಜಿಲ್ಲೆಯ 35 ಗ್ರಾಮ ಆಡಳಿತಾಧಿಕಾರಿಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿನಂದನಾ ಪತ್ರ ವಿತರಿಸಿ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಅಂತೆಯೇ ಜಮೀನಿನ ಪೌತಿ ಖಾತೆ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ನಿಗದಿತ ಸಮಯದಲ್ಲಿ ಕೆಲಸ ಮಾಡಿದ ಜನಪರ ಸೇವೆ ಮತ್ತು ಕರ್ತವ್ಯ ನಿಷ್ಠೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಮೃತರ ಹೆಸರಿನಲ್ಲಿರುವ ಜಮೀನುಗಳನ್ನು ವಾರಸುದಾರರಿಗೆ ಖಾತೆ ಮಾಡಿಕೊಡುವ ಇ-ಪೌತಿ ಖಾತೆ ಆಂದೋಲನ ತ್ವರಿತ ಗತಿಯಲ್ಲಿ ಸಾಗಬೇಕು. ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸುವ ಪ್ರೌವೃತ್ತಿ ಸರಿಯಲ್ಲ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಖಾತೆ ಮಾಡುವಾಗ ತಾಂತ್ರಿಕ ಸಮಸ್ಯೆ ಎದುರಾದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಕೆಲಸದಲ್ಲಿ ನಿರ್ಲಕ್ಷೃ ತೋರುವ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.