ಮದ್ದೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಡಾ.ಶಿವಕುಮಾರ್ ಬಿರಾದರ, ರಾಮಲಿಂಗಯ್ಯ, ರಾಧಿಕಾ, ಧನಂಜಯ, ಶಿವಣ್ಣ ಇದ್ದರು.
ಮದ್ದೂರು: ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉತ್ತೇಜಿಸುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುವುದು ಪ್ರಜಾಪ್ರಭುತ್ವ ದಿನಾಚರಣೆ ಮೂಲ ಉದ್ದೇಶ ಎಂದು ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ತಿಳಿಸಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವಕ್ಕೆ ಅತ್ಯಂತ ದೊಡ್ಡ ಹಾಗೂ ಶ್ರೇಷ್ಠ ಸಂವಿಧಾನ ನಮ್ಮದಾಗಿದ್ದು, ಸಂವಿಧಾನ ಆಶಯಗಳು ಈಡೇರಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಮೂಲಕ ಉತ್ತಮ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ತಾಪಂ ಇಒ ರಾಮಲಿಂಗಯ್ಯ, ನಗರಸಭಾ ಪೌರಾಯುಕ್ತೆ ರಾಧಿಕಾ, ಬಿಇಒ ಧನಂಜಯ, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮುಖಂಡರಾದ ಚಿದಂಬರಮೂರ್ತಿ, ಮಹೇಂದ್ರ, ಮಹದೇವಯ್ಯ, ಆತ್ಮಾನಂದ ಇತರರು ಇದ್ದರು.