ಕೃಷಿ, ಸ್ವಯಂ ಉದ್ಯೋಗಕ್ಕೆ ಸಾಲ ವಿತರಿಸಿ: ಜಿ.ಪಂ ಸಿಇಒ ಕೆ.ಆರ್.ನಂದಿನಿ ಸೂಚನೆ

ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಾಲೋಚನಾ ಸಮಿತಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಾಲೋಚನಾ ಸಮಿತಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆ
  • ಬ್ಯಾಂಕ್ ಅಧಿಕಾರಿಗಳು ಭಾಗಿ
ಮಂಡ್ಯ: ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಸಾಲ ಸೌಲಭ್ಯ ಒದಗಿಸಬೇಕು. ವಿಶೇಷವಾಗಿ ಸಾಲ ಮಂಜೂರಾತಿಯಲ್ಲಿ ಪಾರದರ್ಶಕತೆ ಮತ್ತು ಅರ್ಹತೆಯ ಪರಿಶೀಲನೆ ಕಡ್ಡಾಯವಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸೂಚಿಸಿದರು.
ನಗರದ ಬ್ಯಾಂಕ್ ಆಫ್ ಬರೋಡಾ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳು ಕೈಗೊಳ್ಳಬೇಕಾದ ಆದ್ಯತಾ ಕ್ರಮಗಳ ಕುರಿತು ಮಹತ್ವದ ಸಲಹೆ ನೀಡಿದರು.
ಜಿಲ್ಲೆಯ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ ಸಿಇಒ, ರೈತರಿಗೆ ಬೆಳೆ ಸಾಲ ವಿತರಣೆಯನ್ನು ಹೆಚ್ಚಿಸುವುದು. ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಹಾಗೂ ಕೃಷಿ ಆಧಾರಿತ ಆರ್ಥಿಕತೆಯನ್ನು ಬಲಪಡಿಸುವ ಅಗತ್ಯವಿದೆ. ಈ ವರ್ಷ ಎಲ್-ನಿನೋ ಪರಿಣಾಮದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ವಿಮೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ. ನಷ್ಟದಿಂದ ರಕ್ಷಿಸುವ ಕ್ರಮಗಳನ್ನು ಕೈಗೊಳ್ಳುವಂತೆ ಬ್ಯಾಂಕ್ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಪಸಂಖ್ಯಾತರ ಸಾಲ ಯೋಜನೆಗಳಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ಸ್ವಾವಲಂಬನೆಗೆ ಪ್ರೋತ್ಸಾಹ ನೀಡಬೇಕು. ಇದಲ್ಲದೆ, ಪಿಎಂಎಫ್‌ಎಂಇ ಯೋಜನೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಅರ್ಹ ಫಲಾನುಭವಿಗಳಿಗೆ ಶೀಘ್ರ ಸಾಲ ಮಂಜೂರು ಮಾಡಬೇಕು. ಸಮಗ್ರ ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಹಾಗೂ ಸೆಕೆಂಡರಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಬ್ಯಾಂಕುಗಳು ಮುಂದಾಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಆರ್‌ಬಿಐ ವ್ಯವಸ್ಥಾಪಕಿ ವಿಜಯಶ್ರೀ, ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕ ಸತೀಶ್ ಸಾಲುಂಕೆ , ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ರಾಜೀವ್, ಅರುಣ್‌ಕುಮಾರ್, ನಬಾರ್ಡ್ ವ್ಯವಸ್ಥಾಪಕಿ ಪ್ರಿಯಾ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net