ಡಗ್ಸ್ ಜಾಲದ ಪತ್ತೆಗೆ ಸಹಕರಿಸಿ: ಶಾಸಕ ಪಿ.ರವಿಕುಮಾರ್ ಗಣಿಗ ಮನವಿ

ಮಂಡ್ಯ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವನ್ನು ಶಾಸಕ ಪಿ.ರವಿಕುಮಾರ್ ಗಣಿಗ ಉದ್ಘಾಟಿಸಿದರು.
ಮಂಡ್ಯ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವನ್ನು ಶಾಸಕ ಪಿ.ರವಿಕುಮಾರ್ ಗಣಿಗ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಜನಜಾಗೃತಿ ಜಾಥಾ
  • ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜನೆ

ಮಂಡ್ಯ:

ಮಾದಕ ವ್ಯಸನದಿಂದ ದೇಶದ ಭವಿಷ್ಯವಾದ ಯುವಜನತೆ ಮತ್ತು ವಿದ್ಯಾರ್ಥಿಗಳನ್ನು ರಕ್ಷಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಕರೆ ನೀಡಿದರು.

‘ಮಾದಕ ವ್ಯಸನ ಮುಕ್ತ ಮಂಡ್ಯ’ ಅಭಿಯಾನದಡಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜು ಹಾಗೂ ಶಾಲೆಗಳ ಸುತ್ತಮುತ್ತ ಗಾಂಜಾ, ಡ್ರಗ್ಸ್ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಮಾರಾಟ ಅಥವಾ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ವಿದ್ಯಾರ್ಥಿಗಳು ’ಸ್ಟೂಡೆಂಟ್ ಸಿಐಡಿ’ಗಳಾಗಿ ಕಾರ್ಯನಿರ್ವಹಿಸಿ. ಅದರಂತೆ ತಕ್ಷಣ 112 ತುರ್ತು ಸಂಖ್ಯೆಗೆ ಕರೆ ಮಾಡಿ ನಿಖರ ಮಾಹಿತಿ ನೀಡಬೇಕು. ದೃಢವಾದ ಮಾಹಿತಿ ನೀಡಿ ಅಕ್ರಮ ಜಾಲವನ್ನು ಪತ್ತೆಹಚ್ಚಲು ನೆರವಾಗುವ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ದೇಶದ ಭವಿಷ್ಯವಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮಾದಕ ವ್ಯಸನ ಸೇರಿದಂತೆ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗಬಾರದು. ಕರ್ನಾಟಕವನ್ನು ಮಾದಕ ವ್ಯಸನ ಮುಕ್ತ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ’ಆಪರೇಷನ್ ಆರ್‌ಐಎಸ್‌ಇ’ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕರ್ನಾಟಕ ಸ್ಟೇಟ್ ಪೊಲೀಸ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿರುವ ’ಡ್ರಗ್ಸ್ ಫ್ರೀ ಕರ್ನಾಟಕ’ ವಿಭಾಗದ ಮೂಲಕ ಡ್ರಗ್ಸ್ ಸೇವನೆ, ಸಾಗಾಣಿಕೆ ಅಥವಾ ಮಾರಾಟಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಮಾತನಾಡಿ, ವಿದ್ಯಾರ್ಥಿಗಳು ಭಾರತದ ನಿಜವಾದ ಶಕ್ತಿ. ದೇಶ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗಗಳ ಸಮನ್ವಯದೊಂದಿಗೆ ಈ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಮಂಡ್ಯವನ್ನು ದೇಶದಲ್ಲೇ ಮಾದಕ ವ್ಯಸನ ಮುಕ್ತ ಮಾದರಿ ಜಿಲ್ಲೆಯನ್ನಾಗಿ ರೂಪಿಸಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂಕಲ್ಪ ಮಾಡಬೇಕು ಎಂದು ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಮಾಜಿ ಅಧ್ಯಕ್ಷ ನಯೀಂ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್.ಮಂಜು, ಮಾಜಿ ಸದಸ್ಯ ಶ್ರೀಧರ್ ಇತರರಿದ್ದರು.
ಇದೇ ವೇಳೆ ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ನಡೆದ ನೃತ್ಯ ಪ್ರದರ್ಶನ, ಕರಪತ್ರ ಪ್ರದರ್ಶನ ಹಾಗೂ ಗಣ್ಯರಿಂದ ಸಹಿ ಸಂಗ್ರಹ ಅಭಿಯಾನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಇದಕ್ಕೂ ಮುನ್ನ ಶಾಸಕ ಪಿ.ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ನಗರದ ಸರ್ಕಾರಿ ಮಹಿಳಾ ಕಾಲೇಜು ಆವರಣದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಆಯೋಜಿಸಲಾದ ಬೃಹತ್ ಜನಜಾಗೃತಿ ಜಾಥದಲ್ಲಿ ಭಾಗಿಯಾದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥದಲ್ಲಿ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು. ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net