ಮಾದಕ ವಸ್ತುಗಳ ಹಾವಳಿಯಿಂದ ಮುಕ್ತವಾಗಲಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಕರೆ

ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಉದ್ಘಾಟಿಸಿದರು.
ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿ ಸಭಾಂಗಭಣದಲ್ಲಿ ವ್ಯಸನ ಮುಕ್ತ ದಿನಾಚರಣೆ
  • ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜನೆ

ಮಂಡ್ಯ:

ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಕರೆ ನೀಡಿದರು.

ನಗರದ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ, ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಬಾಲಗರ್ಭಿಣಿ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತು ಬಳಕೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್‌ಸಿಂಗ್, ವಿವೇಕಾನಂದ, ಡಾ.ಬಿ.ಆರ್‌ಅಂಬೇಡ್ಕರ್ ಅವರ ಆದರ್ಶವನ್ನು ಪಾಲಿಸಬೇಕು. ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು. ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪಾಲಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್.ಟಿ.ಯೋಗೇಶ್ ಮಾತನಾಡಿ, ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿ. ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು.
ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕ ಮಹದೇವ್ ಮಾತನಾಡಿ, ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ವಾರ್ತಾ ಇಲಾಖೆಯ ಎಂ.ಸಿ.ಪುಷ್ಪಲತಾ, ತಂಬಾಕು ನಿಯಂತ್ರಣ ಕೋಶಾಧಿಕಾರಿ ತಿಮ್ಮರಾಜು, ಸಿಡಬ್ಲುೃಸಿ ಅಧ್ಯಕ್ಷೆ ಸುಮಿತ್ರಾ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ರಾಜು, ಚಿಕ್ಕಯ್ಯ ಇತರರಿದ್ದರು. ಇದೇ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net