ರೈತ ಸಂಪರ್ಕ ಕೇಂದ್ರಗಳು ಕಲ್ಪವೃಕ್ಷವಿದ್ದಂತೆ

ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
Published on
ನಾಗಮಂಗಲ: ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಮೂಲಕ ದೊರಕುವ ಸರ್ಕಾರದ ಸೌಲಭ್ಯ ಹಾಗೂ ಯಾವುದೇ ಬೆಳೆ ಬೆಳೆಯಲು ಸಲಹೆ ಮಾರ್ಗದರ್ಶನಗಳನ್ನು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದುಕೊಳ್ಳಬಹುದು. ಹಾಗಾಗಿ ರೈತ ಸಂಪರ್ಕ ಕೇಂದ್ರಗಳು ಕಲ್ಪವೃಕ್ಷವಿದ್ದಂತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಬೆಳ್ಳೂರಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ನಂತರ ಇಡೀ ರಾಜ್ಯದಲ್ಲಿ ಕೇವಲ ಬೆರಳೆಣಿಕೆಯಷ್ಟು ರೈತ ಸಂಪರ್ಕ ಕೇಂದ್ರಗಳಿದ್ದವು. ಕಳೆದ 3 ವರ್ಷದಲ್ಲಿ 200ಕ್ಕೂ ಹೆಚ್ಚು ರೈತ ಸಂಪರ್ಕ ಕೇಂದ್ರ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದಾಗ ರಾಜ್ಯಕ್ಕೆ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೊಟ್ಟು ನಮ್ಮ ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ 15 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿತ್ತು. ಜಿಲ್ಲೆಯಲ್ಲಿ ಸ್ವಂತ ನಿವೇಶನ ಹೊಂದಿರುವ ಎಲ್ಲ ಹೋಬಳಿ ಕೇಂದ್ರಗಳಿಗೂ ಆದ್ಯತೆ ಮೇರೆಗೆ ರೈತ ಸಂಪರ್ಕ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿರುವ 8 ರೈತ ಸಂಪರ್ಕ ಕೇಂದ್ರಗಳು ಉದ್ಘಾಟನೆಗೆ ಸಿದ್ಧವಾಗಿವೆ ಎಂದು ಹೇಳಿದರು.
ಅಧಿಕಾರ ನಮ್ಮೊಂದಿಗೆ ಶಾಶ್ವತವಾಗಿ ಇರುವುದಿಲ್ಲ. ಸಿಕ್ಕ ಅವಕಾಶದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂಬುದು ನನ್ನ ಮುಖ್ಯ ಉದ್ದೇಶ. ಬೆಳ್ಳೂರು ಹೋಬಳಿಯ ಜನರು ರಾಜಕೀಯವಾಗಿ ಪ್ರತಿ ಹಂತದಲ್ಲಿಯೂ ನನಗೆ ಹೆಚ್ಚು ಶಕ್ತಿ ನೀಡಿದ್ದಾರೆ. ಹಾಗಾಗಿ ಈ ಹೋಬಳಿಯ ಸರ್ವತೋಮುಖ ಅಭಿವೃದ್ಧಿಗೆ ಕಳೆದ ಮೂರು ವರ್ಷದಲ್ಲಿ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಅಲ್ಲದೆ 30 ಕೋಟಿ ರೂ. ವೆಚ್ಚದಲ್ಲಿ ಬೆಳ್ಳೂರು ಪಟ್ಟಣದ ಕುಡಿಯುವ ನೀರಿನ ಯೋಜನೆ, ದಾಸನಕೆರೆ ಅಭಿವೃದ್ಧಿಗೆ 25 ಕೋಟಿ ರೂ., ನೀರಾವರಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ 6 ಕೋಟಿ ರೂ. ಸೇರಿದಂತೆ 24 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಒಳಚರಂಡಿ, ಹಾಸ್ಟೆಲ್, ಅಂಬೇಡ್ಕರ್ ಭವನ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಹಾಸ್ಟೆಲ್, ಪೌರಕಾರ್ಮಿಕರ ವಸತಿ ಗೃಹ, ಪಟ್ಟಣ ಪಂಚಾಯಿತಿ ಕಟ್ಟಡ ಮತ್ತು ಶಾದಿಮಹಲ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇಷ್ಟೊಂದು ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸಗಳ ಜತೆಗೆ 5 ಗ್ಯಾರಂಟಿ ಯೋಜನೆಯಿಂದ ಈವರೆಗೆ ಪ್ರತಿ ಕುಟುಂಬಕ್ಕೆ ಸುಮಾರು 1 ಲಕ್ಷ ರೂ. ತಲುಪಿದೆ. ಇಂತಹ ಜನಪರ ಯೋಜನೆಯನ್ನು ನಾವೂ ಕೊಟ್ಟಿದ್ದೇವೆಂದು ನನ್ನ ಮುಂದೆ ಬಂದು ಹೇಳುತ್ತಾರೋ ಅವರಿಗೆ ಎಲ್ಲರ ಎದುರು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆಂದು ಬಿಜೆಪಿ, ಜೆಡಿಎಸ್ ನಾಯಕರನ್ನು ಜರಿದರು.
ಬೆಂಗಳೂರಿನಿಂದ ಹಾಸನ ಹಾಗೂ ಆದಿಚುಂಚನಗಿರಿಯಿಂದ ಮೈಸೂರು ಕಡೆಗೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕಾಗಿ ಬೆಂಗಳೂರು, ದೆಹಲಿ, ಮುಂಬೈ ನಂತಹ ದೊಡ್ಡ ನಗರ ಪ್ರದೇಶಗಳಲ್ಲಿರುವಂತೆ ತಾಲೂಕಿನ ನೆಲ್ಲಿಗೆರೆ ಕ್ರಾಸ್ ಅನ್ನು 150 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರೂಪುರೇಷೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಬೆಳ್ಳೂರು ಪಪಂ ವ್ಯಾಪ್ತಿಯ ಒಳಚರಂಡಿ ನೀರನ್ನು ಶುದ್ಧೀಕರಿಸಲು ತಾವರೆಕೆರೆ ಬಳಿ 4.5 ಕೋಟಿ ರೂ. ವೆಚ್ಚದಲ್ಲಿ ಕ್ಯಾಮಸ್ ತಂತ್ರಜ್ಞಾನ ಆಧಾರಿತ 2.46 ಎಂಎಲ್‌ಡಿ ಸಾಮರ್ಥ್ಯದ ಒಳಚರಂಡಿ ಸಂಸ್ಕರಣಾ ಘಟಕ, ಬೆಳ್ಳೂರಿನಲ್ಲಿ 3.25 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ನಿವೃತ್ತ ಸರ್ಕಾರಿ ನೌಕರರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ, ಬೆಳ್ಳೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ನಾಗಲಾಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡವನ್ನು ಸಚಿವರು ಉದ್ಘಾಟಿಸಿದರು.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಡಾ.ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೆಆರ್‌ಐಡಿಎಲ್‌ನ ಇಇ ಸೋಮಶೇಖರ್, ಎಇಇ ಚೈತ್ರಾ, ಮುಖಂಡರಾದ ಸುನೀಲ್ ಲಕ್ಷ್ಮೀಕಾಂತ್, ಎಚ್.ಟಿ.ಕೃಷ್ಣೇಗೌಡ, ಕನ್ನಾಘಟ್ಟ ವೆಂಕಟೇಶ್, ಕೆ.ವಿ.ದಿನೇಶ್, ರಂಗೇಗೌಡ, ಪಾಪಣ್ಣ, ಶಿವಣ್ಣ, ಯಾಸೀನ್, ಯಶೋಧಮ್ಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net