ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಆರೋಗ್ಯ ಉಚಿತ ತಪಾಸಣಾ ಶಿಬಿರದ ಪ್ರಯೋಜನವನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ತಾಲೂಕಿನ ದುದ್ದ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯ, ಆದಿಚುಂಚನಗಿರಿ ಆಸ್ಪತ್ರೆ ಬಿ.ಜಿ ನಗರ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಮಿಮ್ಸ್, ಕಿದ್ವಾಯಿ ಸಂಸ್ಥೆ ಬೆಂಗಳೂರು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, 5,000ಕ್ಕೂ ಹೆಚ್ಚು ಜನರು ನೋಂದಣಿ ಮಾಡಿಕೊಂಡು ತಪಾಸಣೆಗೊಳಪಟ್ಟಿದ್ದಾರೆ. ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಲ್ಪಿಸಲಾಗಿದೆ. ಶಸ್ತ್ರಚಿಕಿತ್ಸೆ ಅವಶ್ಯಕತೆ ಇದ್ದರೆ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ತೀವ್ರತರವಾದಂತ ಕಾಯಿಲೆಯಿಂದ ಬಳಲುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಅಗತ್ಯವಾದಂತಹ ಸೌಲಭ್ಯ ಕಲ್ಪಿಸಬೇಕಾಗಿದೆ. ಅವರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕಾಗಿದ್ದು, ಅಂತವರನ್ನ ಪಟ್ಟಿ ಮಾಡಿ ಆರೋಗ್ಯ ತಪಾಸಣೆ ಮಾಡಿಸಿ ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ತಹಸೀಲ್ದಾರ್ ವಿಶ್ವನಾಥ್, ತಾಪಂ ಇಒ ಲೋಕೇಶ್‌ಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಬೀರಪ್ಪ, ಬೆಟ್ಟೇಗೌಡ, ಸುಚೇಂದ್ರ, ಪ್ರಶೀಲಾ, ಪ್ರಾಂಶುಪಾಲೆ ವೀಣಾ, ಜವರೇಗೌಡ, ಮರಿಚನ್ನೇಗೌಡ ಇತರರಿದ್ದರು.