ಸೌಲಭ್ಯ ತಲುಪಿಸುವುದು ನೌಕರರ ಜವಾಬ್ದಾರಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಿವಿಮಾತು

ಮಂಡ್ಯದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ
  • ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಆಯೋಜನೆ
ಮಂಡ್ಯ: ಸಾರ್ವಜನಿಕರಿಗೆ ಸೌಲಭ್ಯ ತಲುಪಿಸುವುದು ಮತ್ತು ಅರಿವು ಮೂಡಿಸುವುದು ಪ್ರತಿ ಸರ್ಕಾರಿ ನೌಕರರ ಜವಾಬ್ದಾರಿ. ಅಂತೆಯೇ ಜನರಿಗೆ ಸಮಸ್ಯೆಯಾಗದಂತೆ ನಿರಂತರವಾಗಿ ನೌಕರರು ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಅದೇ ರೀತಿ ಜಿಲ್ಲೆಯ ಅಭಿವೃದ್ಧಿ ಪರವಾಗಿ ನೌಕರರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆ ಹಾಗೂ ನಾಗರಿಕ ಸೇವಾ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 18 ಸಾವಿರ ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, 16 ಸಾವಿರ ಸರ್ಕಾರಿ ನೌಕರರು ಮಂಡ್ಯ ಜಿಲ್ಲೆಯವರೇ ಆಗಿರುವುದರಿಂದ ನಿಮ್ಮ ಜಿಲ್ಲೆಯ ಅಭಿವೃದ್ಧಿಗೆ ನೀವು ಹೆಚ್ಚು ಶ್ರಮಿಸಿ. ಸಾರ್ವಜನಿಕರ ಸಮಸ್ಯೆಗಳನ್ನು ಬಹಳ ಪ್ರಾಮಾಣಿಕವಾಗಿ ಹಾಗೂ ಸಾರ್ವಜನಿಕರನ್ನು ಗೌರವದಿಂದ ನೋಡಬೇಕು. ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಬೇಕು. ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ನೀಡುವುದರ ಜತೆ ಜಿಲ್ಲೆಯ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ನಮ್ಮ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದೆ. ಅವುಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಉದ್ಯೋಗಾವಕಾಶ ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ತೆರೆಯಲಾಗಿದೆ. ಹಾಗೂ ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ(ಆರೋಗ್ಯ ವಿಮೆ) 12 ಆಸ್ಪತ್ರೆ ಗುರುತಿಸಲಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, ಸರ್ಕಾರಿ ನೌಕರರು ನಗುನಗುತ ಕೆಲಸ ಮಾಡಬೇಕು. ನಿವೇಶನ ನೀಡಲು ಸರ್ಕಾರಿ ಸ್ಥಳ ಹುಡುಕಿಕೊಡುವ ಗ್ರಾಮ ಆಡಳಿತ ಅಧಿಕಾರಿ ಮತ್ತು ಕಂದಾಯ ನಿರೀಕ್ಷಕರ ಹೆಸರನ್ನು ಒಂದು ದಾರಿಗೆ ನಾಮಕರಣ ಮಾಡಲಾಗುವುದು. ಜಿಲ್ಲೆಯ ಜನರ ಅಭಿವೃದ್ಧಿಗಾಗಿ ಗುರುಭವನಕ್ಕೆ 5 ಲಕ್ಷ ರೂ ನೀಡಲಾಗಿದೆ. ಸರ್ಕಾರಿ ನೌಕರರ ಭವನಕ್ಕೆ 1 ಕೋಟಿ ರೂ ಅನುದಾನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇವೆ ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಶಂಭುಗೌಡ, ಗೌರವಾಧ್ಯಕ್ಷ ಸಿ.ಜೆ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್, ಆನಂದ್, ಕೆಂಪೇಗೌಡ, ಪುಟ್ಟರಾಜು, ರಮೇಶ್, ಅಂಕೇಗೌಡ, ಮಂಜುನಾಥ್ ಇತರರಿದ್ದರು.
ಸರ್ಕಾರಿ ನೌಕರರ ದಿನಾಚರಣೆ ಹಿನ್ನೆಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವಿವಿಧ ಇಲಾಖೆ ಅಧಿಕಾರಿ ಮತ್ತು ನೌಕರರಿಗೆ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಯಿತು. ಅದರಂತೆ 2024 ರಿಂದ 2026ನೇ ಸಾಲಿನವರೆಗೆ 27 ಜನ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net