ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದೀಕ್ಷಾ ದಿನೋತ್ಸವದ ಅಂಗವಾಗಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಸಲಾಯಿತು.
ನಾಗಮಂಗಲ: ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದೀಕ್ಷಾ ದಿನೋತ್ಸವದ ಅಂಗವಾಗಿ ಸೋಮವಾರ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಆದಿಚುಂಚನಗಿರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ತಾಲೂಕಿನ 120 ಆಶಾ ಕಾರ್ಯಕರ್ತೆಯರು ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿದ್ದರು. ರಕ್ತ ಪರೀಕ್ಷೆ, ಇಸಿಜಿ, 2ಡಿ ಎಕೋ, ಹೊಟ್ಟೆಯ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಪ್ಯಾಪ್ ಸ್ಮಿಯರ್ ಪರೀಕ್ಷೆ, ತಜ್ಞರಿಂದ ಆರೋಗ್ಯ ತಪಾಸಣೆ ಹಾಗೂ ಸಮಾಲೋಚನೆ ಮಾಡಲಾಯಿತು.
ಸಮಗ್ರ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಆಶಾ ಕಾರ್ಯಕರ್ತೆಯರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಲಾಯಿತು. ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿತ್ತು. ಮುಂದಿನ ದಿನಗಳಲ್ಲಿ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಪತ್ರಕರ್ತರಿಗೂ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಧರ್ಮೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವರ್ಗದ ಅಧಿಕಾರಿಗಳಾದ ಬ್ರಿಜೇಶ್, ಡಾ.ರವಿ, ಸೋಮಶೇಖರ್ ಸೇರಿದಂತೆ ಮತ್ತಿತರಿದ್ದರು.