ನಗರದಲ್ಲಿ ಬೃಹತ್ ಉದ್ಯೋಗ ಮೇಳ: ಜಿಪಂ ಸಿಇಒ ಕೆ.ಆರ್.ನಂದಿನಿ ಮಾಹಿತಿ

ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಫೆಬ್ರವರಿಯಲ್ಲಿ ಉದ್ಯೋಗ ಮೇಳ
  • ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜನೆ
  • ಜಿಪಂ ಸಿಇಒ ಕೆ.ಆರ್.ನಂದಿನಿ ನೇತೃತ್ವದಲ್ಲಿ ಸಭೆ
ಮಂಡ್ಯ: ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಫೆಬ್ರವರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದನ್ನು ಯುವ ಸಮೂಹ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸಲಹೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೌಶಲಯುತ ಯುವ ಜನರಿಗೆ ಉದ್ಯೋಗ ಕಲ್ಪಿಸಬೇಕು. ಈ ಹಿನ್ನೆಲೆಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ಹೇಳಿದರು.
ಸ್ಥಳೀಯ ಮತ್ತು ಮೈಸೂರು, ಬೆಂಗಳೂರು ಕಂಪನಿಗಳಿಗೆ ಹೆಚ್ಚು ಒತ್ತು ನೀಡಿ, ಉದ್ಯೋಗ ಆಕಾಂಕ್ಷಿಗಳಿಗೆ ಆಸಕ್ತಿಯುತ ಉದ್ಯೋಗ ಅವಕಾಶಗಳನ್ನು ಕಲ್ಪಿಬೇಕು. ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು. ಆಟೋ ಪ್ರಚಾರ, ಬ್ಯಾನರ್, ಕರಪತ್ರ, ದೂರದರ್ಶನ ಹಾಗೂ ಸರ್ಕಾರಿ ಕಚೇರಿಗಳಲ್ಲಿನ ಆವರಣದಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು. ಸಾಮಾಜಿಕ ಜಾಲತಾಣದಲ್ಲಿ ಮೂಲಕ ಪ್ರಚಾರಪಡಿಸಬೇಕು ಎಂದು ತಿಳಿಸಿದರು.
ಮೇಳದಲ್ಲಿ ಭಾಗವಹಿಸುವ ಎಲ್ಲ ಆಕಾಂಕ್ಷಿಗಳಿಗೆ ಸೂಕ್ತ ಮಾಹಿತಿಯೊಂದಿಗೆ ಆಕಾಂಕ್ಷಿಗಳ ಅರ್ಹತೆಯ ಅನುಗುಣವಾಗಿ ಉದ್ಯೋಗ ಕಲ್ಪಿಸಬೇಕು. ಜಿಲ್ಲೆಗೆ ಸೀಮಿತವಾಗದೇ ಬೇರೆ ಸ್ಧಳಗಳಲ್ಲಿಯೂ ಉದ್ಯೋಗ ಸಿಕ್ಕರೆ ಅಲ್ಲಿ ಹೋಗಿ ಕೆಲಸ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಾಲಾ ಕಾಲೇಜು ಪ್ರಾಂಶುಪಾಲರಿಗೆ ಉದ್ಯೋಗ ಪೂರ್ವ ತಯಾರಿ ಬಗ್ಗೆ ಅರಿವು ಮೂಡಿಸಬೇಕು. ಆಕಾಂಕ್ಷಿಗಳು ನಿಮ್ಮ ಆಯ್ಕೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.
ಎಲ್ಲ ತಾಲೂಕಿನಲ್ಲೂ ಮೇಳದ ಬಗ್ಗೆ ಜನರಿಗೆ ಮಾಹಿತಿ ದೊರಕುವಂತೆ ಮಾಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲ ಯುವ ಉದ್ಯೋಗ ಆಕಾಂಕ್ಷಿಗಳಿಗೆ ಅರಿವು ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳ ಕುರಿತು ಸಭೆ ನಡೆಸಿ. ತಾಪಂ ಮತ್ತು ಗ್ರಾಪಂನಲ್ಲಿ ಉದ್ಯೋಗ ಮೇಳದ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯಯೋಜನಾಧಿಕಾರಿ ಧನುಷ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ನಬಾರ್ಡ್ ಅಧಿಕಾರಿ ಹರ್ಷಿತಾ, ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ನಾಗಾನಂದ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಲಿಂಗಯ್ಯ, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ಡಿಡಿಪಿಐ ಲೋಕೇಶ್, ಪ್ರಸನ್ನಕುಮಾರ್, ಹಿರಿಯ ವಿಜ್ಞಾನಿ ಮುಖ್ಯಸ್ಥೆ ಡಾ.ಕಮಲಾ ಬಾಯಿ ಕೂಡಗಿ, ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಟಿ.ದಿನೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net