ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಶಿಕ್ಷಕರಿಗೆ ಬಿಇಒ ಧನಂಜಯ್ ಸಲಹೆ
ಗುಡಿಗೆರೆ
ಗುಡಿಗೆರೆ ಗ್ರಾಮದ ವಿದ್ಯಾ ವಿಹಾರ್ ಇಂಟರ್‌ನ್ಯಾಷನಲ್ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಣ್ಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಿಇಒ ಧನಂಜಯ್ ಉದ್ಘಾಟಿಸಿದರು. ಕೆ.ಕುಮಾರರಾಜು, ನಾಗೇಶ್, ವಿ.ಟಿ.ಹೇಮಾವತಿ, ಜವರೇಗೌಡ, ಸುಂದ್ರಪ್ಪ, ಡಾ.ಸೌಮ್ಯಾ ರಾಜೇಶ್ ಇತರರು ಇದ್ದರು.ಗುಡಿಗೆರೆ
Published on: 

ಕೆ.ಎಂ.ದೊಡ್ಡಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಪೂರಕ ವೇದಿಕೆಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ್ ತಿಳಿಸಿದರು.

ಸಮೀಪದ ಗುಡಿಗೆರೆ ಗ್ರಾಮದ ವಿದ್ಯಾ ವಿಹಾರ್ ಇಂಟರ್‌ನ್ಯಾಷನಲ್ ಶಾಲೆ ಆವರಣದಲ್ಲಿ ರೋಟರಿ ಭಾರತೀನಗರ ಸೆಂಟ್ರಲ್ ಸಹಯೋಗದಲ್ಲಿ ಆಯೋಜಿಸಿದ್ದ ಅಣ್ಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಅಭಿನಯ ಸೇರಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಪ್ರತಿಭೆಗಳ ಅನಾವರಣ ಮಾಡಬೇಕು ಎಂದು ಹೇಳಿದರು.

ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವ ಜತೆಗೆ ಆತ್ಮವಿಶ್ವಾಸ, ಧೈರ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅಂತಹ ಪ್ರತಿಭೆಯನ್ನು ಆರಂಭದಲ್ಲಿಯೇ ಗುರುತಿಸಿ, ಅಗತ್ಯ ತರಬೇತಿ ನೀಡಿ ಕ್ಲಸ್ಟರ್ ಮಟ್ಟದ ಸ್ಪರ್ಧೆಗಳಿಗೆ ಸಿದ್ಧಪಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ತಮ್ಮ ಪ್ರತಿಭೆ ಪ್ರದರ್ಶಿಸಲು ಸಮಾನ ಅವಕಾಶ ದೊರೆಯಬೇಕು. ಪ್ರತಿಭಾ ಕಾರಂಜಿಯ ಸದುಪಯೋಗ ಪಡೆದುಕೊಂಡು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.

ವಿದ್ಯಾ ವಿಹಾರ್ ಇಂಟರ್‌ನ್ಯಾಷನಲ್ ಶಾಲೆ ಪ್ರಾಂಶುಪಾಲ ಮಹೇಶ್ ಮಾತನಾಡಿ, ವಿವಿಧ ಶಾಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಮ್ಮ ಶಾಲೆ ಆವರಣದಲ್ಲಿ ಸೇರಿ ಪ್ರತಿಭೆ ಪ್ರದರ್ಶಿಸುತ್ತಿರುವುದು ಸಂತೋಷ ತಂದಿದೆ. ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಇಂತಹ ಕಾರ್ಯಕ್ರಮಗಳು ಅವರ ಭವಿಷ್ಯದ ಸಾಧನೆಗಳಿಗೆ ಪ್ರೇರಣೆಯಾಗಲಿವೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುವುದು ನಮ್ಮೆಲ್ಲರ ಆಶಯವಾಗಿದೆ ಎಂದು ಹೇಳಿದರು.

ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಅಭಿನಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರತಿಭೆಯನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಜಿಪಂ ಮಾಜಿ ಸದಸ್ಯ ಕೆ.ಕುಮಾರರಾಜು, ಕ್ಷೇತ್ರ ಸಮನ್ವಯಾಧಿಕಾರಿ ನಾಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ವಿ.ಟಿ.ಹೇಮಾವತಿ, ಕಾರ್ಯದರ್ಶಿ ಜವರೇಗೌಡ, ರೋಟರಿ ಅಧ್ಯಕ್ಷ ಪ್ರದೀಪ್ ಸುಂದ್ರಪ್ಪ, ಕಾರ್ಯದರ್ಶಿ ಡಾ. ಸೌಮ್ಯಾ ರಾಜೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ಮಂಜು, ಸಮೂಹ ಸಂಪನ್ಮೂಲ ವ್ಯಕ್ತಿ ನಂದೀಶ್ ಇತರರು ಇದ್ದರು.