ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸೋಣ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on
ಮಂಡ್ಯ: ಜಿಲ್ಲಾಡಳಿತದಿಂದ ಆ.15ರಂದು 79ನೇ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣ, ಶಿಸ್ತುಬದ್ಧ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರೀಯ ಹೆಮ್ಮೆಯ ಸಂಕೇತ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ಆಯೋಜಿಸಬೇಕು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಶಿಸ್ತು ಬದ್ಧವಾಗಿ ಪಥಸಂಚಲನದಲ್ಲಿ ಭಾಗವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಿಂಬಿಸುವ ನೃತ್ಯ, ಗೀತಗಾಯನ ಹಾಗೂ ಇತರೆ ಪ್ರದರ್ಶನಕ್ಕೆ ಆದ್ಯತೆ ನೀಡಬೇಕು. ಉತ್ತಮ ಪ್ರದರ್ಶನ ನೀಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಆ.14ರ ರಾತ್ರಿ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಪ್ರಮುಖ ವೃತ್ತ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಮೆರುಗು ನೀಡಬೇಕು ಎಂದು ತಿಳಿಸಿದರು.
ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ನಿಷೇಧ: ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆಗೆ ಯಾವುದೇ ಅವಕಾಶ ನೀಡಬಾರದು. ಒಂದು ವೇಳೆ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ನಗರಸಭೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕಾಗದ ಅಥವಾ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಮಾತ್ರ ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮ ನಡೆಯುವ ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಸ್ವಚ್ಛ ಶೌಚಗೃಹ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ತುರ್ತು ವೈದ್ಯಕೀಯ ಸೇವೆ, ಅಗ್ನಿಶಾಮಕ ಮತ್ತು ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ತಹಸೀಲ್ದಾರ್ ವಿಶ್ವನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net