‘ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆ’ಗೆ ಶೀಘ್ರ ಸೂರು

ಪಾಂಡವಪುರ ತಾಲೂಕಿನ ಹರಳಹಳ್ಳಿ ಬಳಿ ಇರುವ ಅಂಕೇಗೌಡ ಪುಸ್ತಕ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಭೇಟಿ ನೀಡಿದರು.
ಪಾಂಡವಪುರ ತಾಲೂಕಿನ ಹರಳಹಳ್ಳಿ ಬಳಿ ಇರುವ ಅಂಕೇಗೌಡ ಪುಸ್ತಕ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಭೇಟಿ ನೀಡಿದರು.
Published on
ಪಾಂಡವಪುರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡ ಅವರ ‘ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆ’ಗೆ ಗ್ರಂಥಾಲಯ ಹಾಗೂ ಜ್ಞಾನ ಕೇಂದ್ರದ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಎಲೆಚಾಕನಹಳ್ಳಿಯಲ್ಲಿ ನಿವೇಶನ ಪರಿಶೀಲಿಸಿದರು.
ತಾಲೂಕಿನ ಹರಳಹಳ್ಳಿ ಬಳಿ ಇರುವ ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆಯಲ್ಲಿ 20 ಲಕ್ಷಕ್ಕೂ ಅಧಿಕ ಪುಸ್ತಕವಿದ್ದು, ಇದರ ನಿರ್ವಹಣೆಗೆ ಎರಡು ಎಕರೆ ಜಮೀನು, ಐದು ಕೋಟಿ ರೂ. ಅನುದಾನ ಒದಗಿಸಬೇಕೆಂದು ಅಂಕೇಗೌಡ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿ ಹಿನ್ನೆಲೆಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಲೆಚಾಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸುತ್ತಿರುವ ವಸತಿ ಬಡಾವಣೆಗೆ ಇತ್ತೀಚೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸ್ಥಳದ ಲಭ್ಯತೆ, ಸೂಕ್ತತೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಬಳಿಕ ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆಗೆ ಭೇಟಿ ನೀಡಿ, ಅಂಕೇಗೌಡ ಅವರೊಂದಿಗೆ ಸಮಾಲೋಚನೆ ನಡೆಸಿ, ಗ್ರಂಥಾಲಯದ ಚಟುವಟಿಕೆ, ಸಾರ್ವಜನಿಕರಿಗೆ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ಪಡೆದು, ಸಂಸ್ಥೆಯ ವಿಸ್ತರಣೆ ಮತ್ತು ಜ್ಞಾನ ಪ್ರಸಾರದ ಉದ್ದೇಶದಿಂದ ಎರಡು ಎಕರೆ ಜಾಗ ಒದಗಿಸುವ ಕುರಿತು ಚರ್ಚಿಸಿದರು.
ಜಿಲ್ಲೆಯಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸುವುದು, ಯುವ ಜನರಲ್ಲಿ ಜ್ಞಾನಾರ್ಜನೆಗೆ ಪೂರಕ ವಾತಾವರಣ ನಿರ್ಮಿಸುವುದು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಶೈಕ್ಷಣಿಕ ಮತ್ತು ಜ್ಞಾನ ಸಂಪನ್ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net