ಡೆಂಘೆ ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯದಲ್ಲಿ ಆಯೋಜಿಸಿದ್ದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ
  • ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ
ಮಂಡ್ಯ: ಡೆಂಘೆ ಅಪಾಯಕಾರಿ ಸಾಂಕ್ರಾಮಿಕ ರೋಗ. ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಕಾಯಿಲೆ. ವಿಶೇಷವಾಗಿ ಮಳೆಗಾಲ ಮತ್ತು ನೀರು ನಿಂತುಕೊಳ್ಳುವ ಪ್ರದೇಶಗಳಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚು ಕಂಡುಬರುತ್ತವೆ. ಆದ್ದರಿಂದ ಡೆಂಘೆ ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಡೆಂಘೆ ನಿಯಂತ್ರಣ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡೆಂಘೆ ಜ್ವರ ಪ್ರಕರಣಗಳ ಅಗತ್ಯ ನಿರ್ವಹಣೆಗಾಗಿ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಟ ತಲಾ ಐದು ಹಾಸಿಗೆ ಮೀಸಲಿಡಬೇಕು. ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಶಾಲೆಯಲ್ಲಿ ಪ್ರಾರ್ಥನೆ ವೇಳೆಯಲ್ಲಿ ಡೆಂಘೆ ನಿಯಂತ್ರಣ ಕುರಿತು ಕರಪತ್ರಗಳನ್ನು ಓದುವಂತೆ ನಿರ್ದೇಶನ ನೀಡಿದರು.
ರಸ್ತೆ ಬದಿಯಲ್ಲಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಹಣ್ಣು ಕತ್ತರಿಸಿ ಮಾರಾಟ ಮಾಡುವುದನ್ನು ನಿಷೇಧಿಸಬೇಕು. ಮತ್ತು ಹೋಟೆಲ್ ಗಳಲ್ಲಿ ಮಾಂಸದ ಅಂಗಡಿಗಳಲ್ಲಿ ಕಲ್ಯಾಣ ಮಂಟಪಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವುದರ ಜತೆಗೆ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಉತ್ತಮ ಪರಿಸರಕ್ಕೆ ಹೆಚ್ಚು ಮಹತ್ವ ನೀಡಲಾಗಿದೆ. ಮನೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಕಡ್ಡಾಯವಾಗಿ ಸ್ವಚ್ಛತೆಯನ್ನು ಕಾಪಾಡಬೇಕು. ಗ್ರಾಮ ಪಂಚಾಯಿತಿ ಮತ್ತು ನಗರಸಭೆಗಳು ನಿಯಮಿತವಾಗಿ ಫಾಗಿಂಗ್ ಕೀಟನಾಶಕ ಸಿಂಪಡಣೆ ಮಾಡಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಜನರಲ್ಲಿ ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ. ಶಾಲೆ, ಕಾಲೇಜು ಮತ್ತು ಸಾಮಾಜಿಕ ಸಂಘಟನೆಗಳು ಡೆಂಘೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಬೇಕು. ಸ್ವಚ್ಛ ಪರಿಸರ, ಡೆಂಘೆ ಮುಕ್ತ ಸಮಾಜ ಎಂಬ ಮನೋಭಾವನೆಯನ್ನು ಪ್ರತಿಯೊಬ್ಬರಲ್ಲೂ ಬೆಳೆಸಬೇಕು. ಡೆಂಘೆ ಒಂದು ತಡೆಯಬಹುದಾದ ರೋಗ. ಜಾಗೃತಿ ಮತ್ತು ಮುಂಜಾಗ್ರತಾ ಕ್ರಮಗಳ ಮೂಲಕ ಡೆಂಘೆ ಹರಡುವಿಕೆಯನ್ನು ನಿಯಂತ್ರಿಸಬಹುದು. ಪ್ರತಿ ನಾಗರಿಕನು ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಡಿಡಿಪಿಐ ಲೋಕೇಶ್, ಡಾ.ಕುಮಾರ, ಡಾ.ವೀರಭದ್ರಪ್ಪ, ಡಾ.ಜವರೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net