ಮಂಡ್ಯ: ನಗರದ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಜ.25ರಂದು ಅಂತಾರಾಷ್ಟ್ರೀಯ ಮತದಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಿ ಎಂದು ಹೇಳಿದರು.
ಜ.23ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಲಾಗುವುದು. ಅಂತಾರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಗುವುದು. ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಚುನಾವಣಾ ತಹಸೀಲ್ದಾರ್ ರವಿಶಂಕರ್, ಹಿಂದುಳಿದ ವರ್ಗದ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುಳಾ, ಮುಜರಾಯಿ ತಹಸೀಲ್ದಾರ್ ತಮ್ಮೇಗೌಡ, ಪೌರಾಯುಕ್ತೆ ಪಂಪಶ್ರೀ, ಮಂಡ್ಯ ತಹಸೀಲ್ದಾರ್ ವಿಶ್ವನಾಥ್ ಇತರರಿದ್ದರು.