ಇಡೀ ಕುಟುಂಬಕ್ಕೆ ತಲುಪಿದ ‘ಗ್ಯಾರಂಟಿ’: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ರಾಜ್ಯಮಟ್ಟದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.
ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ರಾಜ್ಯಮಟ್ಟದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಆಯೋಜನೆ
ಮಂಡ್ಯ: ರಾಜ್ಯದಲ್ಲಿ ಹಿಂದೆ ಆಡಳಿತ ನಡೆಸಿದ ಬಿಜೆಪಿ, ಜೆಡಿಎಸ್‌ನವರು ಮಹಿಳೆಯರಿಗೆ ನೇರವಾಗಿ ಅನುಕೂಲವಾಗುವ ಯೋಜನೆ ರೂಪಿಸಲಿಲ್ಲ. ಈಗ ನಮ್ಮ ಗ್ಯಾರೆಂಟಿ ಯೋಜನೆ ಕಂಡು ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತೀ ವರ್ಷ 1.30 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಆದರೆ, ಈ ಬಗ್ಗೆ ನಾವು ಲಾನುಭವಿಗಳನ್ನು ಪ್ರಶ್ನಿಸಿದರೆ, ನಮಗೆ ಗ್ಯಾರೆಂಟಿ ಯೋಜನೆ ತಲುಪುತ್ತಿವೆ. ನಮ್ಮ ಗಂಡ ಮತ್ತು ಮಕ್ಕಳಿಗೆ ಸಿಗುತ್ತಿಲ್ಲ ಎನ್ನುತ್ತಾರೆ. ಒಂದು ಕುಟುಂಬ ಎಂದರೆ ಕೇವಲ ಸೀ ಮಾತ್ರ ಅಲ್ಲ, ಅದರಲ್ಲಿ ಗಂಡ ಮತ್ತು ಮಕ್ಕಳು ಇದ್ದರಷ್ಟೇ ಪರಿಪೂರ್ಣ ಕುಟುಂಬವಾಗಲು ಸಾಧ್ಯ. ಈ ಬಗ್ಗೆ ಮಹಿಳೆಯರು ತಮ್ಮ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಲಭ್ಯವಾಗಲಿದ್ದು, ದೇಶದ ಆಡಳಿತ ವ್ಯವಸ್ಥೆಯಲ್ಲಿ ಪಾಲುದಾರಿಕೆ ಪಡೆಯಲು ಸರ್ವ ಸನ್ನದ್ಧರಾಗಬೇಕು. ಲೋಕಸಭೆಯಲ್ಲಿ ಶೇ.50ರಷ್ಟು ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬ ಚರ್ಚೆ ಈಗಾಗಲೇ ನಡೆದಿದೆ. ಮುಂಬರುವ ಚುನಾವಣೆಗಳಲ್ಲಿ ಅದು ಜಾರಿಗೆ ಬರಲಿದೆ. ಹಾಗಾಗಿ ಮುಂದಿನ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಸಹ ಗ್ರಾಮಗಳ ಅಭ್ಯುದಯ ಮತ್ತು ಆಡಳಿತ ವ್ಯವಸ್ಥೆಯಲ್ಲಿ ನಿಪುಣತೆ ಹೊಂದಿರುವಂತಹ ಮಹಿಳೆಯರು ಆಯ್ಕೆಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಸಧ್ಯ ನಾವು ಬದಲಾವಣೆಯ ಕಾಲಘಟ್ಟದಲ್ಲಿದ್ದೇವೆ. ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದು ಬದಲಾಗಿದ್ದು, ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ. ಅದೇ ರೀತಿ ದೇಶದ ಆಡಳಿತ ಮತ್ತು ಕಾನೂನು ಮಾಡುವ ಕ್ಷೇತ್ರದಲ್ಲೂ ಸಹ ಮಹತ್ತರ ಪಾತ್ರ ವಹಿಸುವಂತಾಗಬೇಕು. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೀಶಕ್ತಿ ಸಂಘಟನೆಗಳನ್ನು ಅಸ್ತಿತ್ವಕ್ಕೆ ತಂದರು. ನಂತರ ಧರ್ಮಸ್ಥಳ ಕ್ಷೇತ್ರದವರೂ ಸಹ ಇದನ್ನು ಹೆಚ್ಚಾಗಿ ಬೆಳೆಸುವುದರೊಂದಿಗೆ ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಗೆ ಅಗತ್ಯವಾದ ನಿಟ್ಟಿನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗುವಷ್ಟರ ಮಟ್ಟಿಗೆ ಮುಂದುವರೆದಿದ್ದಾರೆ. ಸೀಶಕ್ತಿ ಸಂಘಟನೆಗಳ ಉತ್ಪನ್ನಗಳಿಗೂ ಉತ್ತಮ ಮಾರುಕಟ್ಟೆ ಅಗತ್ಯವಾಗಿದೆ ಎಂಬುದನ್ನು ಅರಿತು ಮುಂದಿನ ದಿನಗಳಲ್ಲಿ ಮಂಡ್ಯದಲ್ಲೂ ಸಹ 100*100 ಅಡಿ ಅಳತೆಯ ನಿವೇಶನ ಕೊಟ್ಟು ಅದರಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಉತ್ಪನ್ನಗಳನ್ನು ರ್ತು ಮಾಡುವುದು, ತಮ್ಮ ಉತ್ಪನ್ನಗಳನ್ನು ತಾವೇ ಮಾರುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರಿನ ಹೆಬ್ಬಾಳದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಮಿಲೆಟ್ ಹಬ್ ನಿರ್ಮಿಸಲಾಗುತ್ತಿದ್ದು, ಈಗಾಗಲೇ ಶೇ. 50ರಷ್ಟು ಕೆಲಸ ಪೂರ್ಣವಾಗಿದೆ. ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡುವುದರೊಂದಿಗೆ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ಅದೇ ರೀತಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಒ ಕೆ.ಆರ್.ನಂದಿನಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಆಶಾ ಇತರರಿದ್ದರು.

ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ವಾಗ್ದಾಳಿ
ಅಧಿಕಾರಕ್ಕೆ ಬಂದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ಕೊಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆವಿಗೂ ಏನೂ ಆಗಲಿಲ್ಲ. ಸುಪ್ರೀಂ ಕೋರ್ಟ್‌ನಿಂದ ಈಗ ಆದೇಶ ಬಂದಿದೆ. ಆದರೂ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಐವರು ಕೇಂದ್ರ ಸಚಿವರಿದ್ದಾರೆ. 19 ಜನ ಎನ್‌ಡಿಎ ಸಂಸದರಿದ್ದಾರೆ. ಕೇಂದ್ರದಿಂದ ಬರುವಂತಹ ಯೋಜನೆಗಳು, ಅನುದಾನ ಕಡಿತವಾಗಿದೆ. ಆದರೂ ಅವರ‌್ಯಾರೂ ಪ್ರಶ್ನೆ ಮಾಡುತ್ತಿಲ್ಲ. ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ 50 ಸಾವಿರ ಕೋಟಿ ರೂ ಸಾಲ ಮಾಡಿದ್ದರು. ಆದರೆ, ನರೇಂದ್ರಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಸಾಲ 2.50 ಲಕ್ಷ ಕೋಟಿ ರೂಗೆ ಏರಿಕೆಯಾಗಿದೆ. ಈ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು ದೂರಿದರು.

ಮಂಡ್ಯದಲ್ಲಿ ಮಾರುಕಟ್ಟೆ ಸ್ಥಾಪನೆ
ಅಧ್ಯಕ್ಷತೆ ವಹಿಸಿದ್ದ ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, ಸೀಶಕ್ತಿ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಂಡ್ಯದ ಗಾಂಧಿನಗರ 4ನೇ ಕ್ರಾಸ್‌ನಲ್ಲಿ 100*100 ಅಳತೆಯ ನಿವೇಶನ ನೀಡಿ ಶೀಘ್ರ ಮೂಲ ಸೌಲಭ್ಯ ಕಲ್ಪಿಸಿಕೊಡುವುದಾಗಿ ಘೋಷಣೆ ಮಾಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ಸೌಲಭ್ಯ ಸಿಗುತ್ತಿವೆ. ಆದರೆ ಈ ಬಗ್ಗೆ ಯಾರೂ ಮಾತನಾಡುವುದಿಲ್ಲ. ಎರಡು ಸಾವಿರ ರೂ ಕೊಟ್ಟಿಲ್ವಾ?. ಒಂದೆರಡು ತಿಂಗಳು ತಡವಾಗಿದೆ ಎಂದರೆ ಬಿಜೆಪಿಯವರು ದೊಡ್ಡದಾಗಿ ಬಾಯಿ ತೆಗೆಯುತ್ತಾರೆ. ಅವರು ಏನು ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ನಾವು ಕೊಡುವ 2 ಸಾವಿರ ರೂ ಕೊಟ್ಟಿದ್ದಾರೋ ಇಲ್ಲವೋ ಎಂಬುದನ್ನು ಮಾತ್ರ ಸರಿಯಾಗಿ ಲೆಕ್ಕ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ನಾವು ಬಡಪರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ, ಜೆಡಿಎಸ್‌ನವರು ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮಂಗ ಮಾಡುತ್ತಿದ್ದಾರೆ. ನಾವು ಜನರನ್ನು ಸ್ವಾವಂಲಭಿಯನ್ನಾಗಿಸುವ ಕೆಲಸ ಮಾಡುತ್ತಿದ್ದೇವೆ. ಜತೆಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಈ ಭಾಗದಲ್ಲಿರುವ ನಾಲೆಗಳ ಅಭಿವೃದ್ಧಿ ಮಾಡಿ ರೈತರ ಹೊಲ-ಗದ್ದೆಗಳಿಗೆ ಸರಾಗವಾಗಿ ನೀರು ಹರಿಯುವಂತೆ ಮಾಡುತ್ತಿದ್ದೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net