ಭೂಮಾಪಕರ ಬೇಡಿಕೆ ಈಡೇರಿಸುವಂತೆ ಒತ್ತಾಯ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಮಂಡ್ಯ ನಗರದ ಕರ್ನಾಟಕ ರಕ್ಷಣಾ ವೇದಿಕೆ(ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ
ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಕೆ
ಮಂಡ್ಯ:ಭೂಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ರೈತರಿಗಾಗುತ್ತಿರುವ ತೊಂದರೆಗಳನ್ನು ತಪ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಎಸ್.ಡಿ.ಮಹದೇವ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯಾದ್ಯಂತ ಪರವಾನಗಿ ಭೂಮಾಪಕರು ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು, ಇದರಿಂದಾಗಿ ಕಳೆದ ಹಲವು ತಿಂಗಳಿಂದ ಅಳತೆ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದಾಗಿ ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತ ಸಮುದಾಯಕ್ಕೆ ಅತೀವ ತೊಂದರೆಯಾಗಿದೆ ಎಂದು ತಿಳಿಸಿದರು.
ರೈತರು ತಮ್ಮ ಜಮೀನುಗಳ ಹದ್ದುಬಸ್ತು, ದುರಸ್ತಿ, ಪೋಡಿ ಹಾಗೂ 11ಇ ನಕ್ಷೆಗಳಿಗಾಗಿ ಈಗಾಗಲೇ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಪಾವತಿಸಿದ್ದಾರೆ. ಆದರೆ, ಭೂಮಪಕರ ಮುಷ್ಕರದ ಕಾರಣದಿಂದಾಗಿ ಈ ಕೆಲಸಗಳು ವಿಳಂಬವಾಗುತ್ತಿದ್ದು, ರೈತರು ಅಲೆದಾಡುವಂತಾಗಿದೆ. ಕೃಷಿ ಚಟುವಟಿಕೆಗಳಿಗೆ ಹಾಗೂ ಸಾಲ ಸೌಲಭ್ಯಗಳನ್ನು ಪಡೆಯಲು ಇ ನಕ್ಷೆಗಳು ಅಗತ್ಯವಾಗಿದ್ದು, ವಿಳಂಬದಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಈ ಕೂಡಲೇ ಮಧ್ಯೆ ಪ್ರವೇಶಿಸಿ, ಕಂದಾಯ ಸಚಿವರು ಮತ್ತು ಮಾನ್ಯ ಮಂತ್ರಿಗಳ ಮಟ್ಟದಲ್ಲಿ ಚರ್ಚಿಸಿ ಭೂಮಾಪಕರ ಸಮಸ್ಯೆಗಳನ್ನು ತಕ್ಷಣವೇ ಈಡೇರಿಸಬೇಕು. ಆ ಮೂಲಕ ರೈತರಿಗೆ ಬಾಕಿ ಉಳಿದಿರುವ ಅಳತೆ ಕಾರ್ಯಗಳನ್ನು ಪೂರೈಸಿ ಅನುಕೂಲ ಮಾಡಿಕೊಡಬೇಕೆಂದು ಈ ಮೂಲಕ ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ನಮ್ಮ ಸಂಘಟನೆಯು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಕೆ.ಪಿ.ಇಂದ್ರಕುಮಾರ್, ತಾಲೂಕು ಅಧ್ಯಕ್ಷ ಮಂಜುನಾಥ್, ಪರಮೇಶ್, ರೇವಣ್ಣ, ಜಯರಾಮು, ಪ್ರದೀಪ್, ಶಿವಲಿಂಗೇಗೌಡ, ನರಸಪ್ಪಗೌಡ, ಶಿವರಾಜು ಇತರರಿದ್ದರು.