ಜೂ.30ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ
  • ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗಿ
ಮಂಡ್ಯ: ಅತ್ಯಂತ ದೂರದೃಷ್ಟಿ ಹೊಂದಿದ್ದ ಹಾಗೂ ಮಹಾನ್ ಆಡಳಿತಗಾರ ನಾಡಪ್ರಭು ಕೆಂಪೇಗೌಡ ಅವರ ಜಯಂತಿನ್ನು ಜೂ.30 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲರ ಸಹಕಾರ ಹಾಗೂ ಸಮನ್ವಯತೆ ಹಾಗೂ ಸಾಮರಸ್ಯದಿಂದ ಕೆಂಪೇಗೌಡರ ಸಾಧನೆ ಮತ್ತು ಕೊಡುಗೆ, ಆದರ್ಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು ಎಂದರು.
ಕೆಂಪೇಗೌಡರ ಭಾವಚಿತ್ರ ಬೆಳ್ಳಿರಥ ಮೆರವಣಿಗೆಯನ್ನು ಅಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಅಂಬೇಡ್ಕರ್ ಭವನದವರಿಗೆ ಹಮ್ಮಿಕೊಳ್ಳಲಾಗುವುದು. ವೇದಿಕೆ ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಗೆ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.
ಕೆಂಪೇಗೌಡರ ಜನ್ಮ ದಿನದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಘಟನೆಗಳಿಗೆ ಮತ್ತು ಸಾರ್ವಜನಿಕರಿಗೂ ತಲುಪಿಸಬೇಕು. ಜಯಂತಿ ಪ್ರಯುಕ್ತ ಎಲ್ಲ ತಾಲೂಕಿನ ಶಾಲೆಗಳಲ್ಲಿ ಕೆಂಪೇಗೌಡರ ಸಾಧನೆ ಮತ್ತು ಕೊಡುಗೆ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸಬೇಕು. ಅವರ ಕೊಡುಗೆ ಸಾಧನೆ ಕುರಿತು ವಸ್ತು ಪ್ರದರ್ಶನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಿಸಿ, ಕಾರ್ಯಕ್ರಮ ಕುರಿತ ಬ್ಯಾನರ್ ಅಳವಡಿಸಬೇಕು. ದೀಪಾಲಂಕಾರ ಮಾಡಬೇಕು ಹಾಗೂ ಸಮುದಾಯದಲ್ಲಿ ಸಾಧನೆ ಮಾಡಿದ ಐವರಿಗೆ ಸನ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜಿಪಂ ಉಪ ಕಾರ್ಯದರ್ಶಿ ಡಾ.ಶಿವಲಿಂಗಯ್ಯ, ಒಕ್ಕಲಿಗ ಸಂಘ ಸೇವಾ ಟ್ರಸ್ಟ್ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net