ಪಿಂಚಣಿ ಹೆಚ್ಚಿಸುವ ಮನವಿಗೆ ಸ್ಪಂದನೆ: ನಿವೃತ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಹೇಳಿಕೆ

ಮಂಡ್ಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಕಾನೂನು ಅರಿವು ಕಾರ್ಯಕ್ರಮ
  • ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜನೆ

ಮಂಡ್ಯ:

ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಅನುಭವದ ಸಂಪತ್ತು. ಅವರ ಜೀವನವು ಗೌರವಯುತ ಹಾಗೂ ಸುರಕ್ಷಿತವಾಗಿರಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ನಾಲ್ಸಾ(ಹಿರಿಯ ನಾಗರಿಕರಿಗೆ ಕಾನೂನು ಸೇವೆಗಳು) ಯೋಜನೆ ಅಧ್ಯಕ್ಷ ಆರ್.ಗುರುರಾಜನ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಭವನದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ವಕೀಲರ ಸಂಘ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಕಾನೂನು ಅರಿವು ಕಾರ್ಯಕ್ರಮ, ವಿವಿಧ ಸಹಾಯಕ ಸಲಕರಣೆಗಳ ವಿತರಣೆ ಹಾಗೂ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯ, ನಿರ್ಲಕ್ಷೃ ಅಥವಾ ಹಕ್ಕುಗಳ ಉಲ್ಲಂಘನೆಗೆ ಕಾನೂನು ಅವಕಾಶ ನೀಡುವುದಿಲ್ಲ. ಹಿರಿಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಅಗತ್ಯವಿದ್ದಲ್ಲಿ ಕಾನೂನು ಸೇವೆಗಳ ನೆರವನ್ನು ಪಡೆಯಬೇಕು ಎಂದು ಸಲಹೆ ನೀಡಿದರು.
ಸರ್ಕಾರದಿಂದ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವಾರ್ಷಿಕ ಪಿಂಚಣಿ ಮೊತ್ತವನ್ನು 32 ಸಾವಿರ ರೂನಿಂದ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಈ ಕುರಿತು ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪಿಂಚಣಿ ಮೊತ್ತ ಹೆಚ್ಚಿಸುವ ಕುರಿತು ಪರಿಗಣಿಸುವ ಭರವಸೆ ನೀಡಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಚಂದ್ರಶೇಖರ್, ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬ ಅವುಗಳ ಬಗ್ಗೆ ಮಾಹಿತಿ ಪಡೆದು ಯೋಜನೆ ಸದುಪಯೋಗಿಸಿಕೊಳ್ಳಬೇಕು. ಮಾತ್ರವಲ್ಲದೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜತೆಗೆ ದೈನಂದಿನ ವ್ಯಾಯಾಮ, ಸಮತೋಲಿತ ಆಹಾರ ಸೇವನೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯರು ಜೀವನಾನುಭವ, ಜ್ಞಾನ ಮತ್ತು ಮೌಲ್ಯಗಳು ಮುಂದಿನ ಪೀಳಿಗೆಗೆ ದಾರಿದೀಪ. ಆದ್ದರಿಂದ ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು, ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡುವುದು ಮತ್ತು ಅವರ ಸುಖ-ಸಮೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸುವುದು ನಮ್ಮೆಲ್ಲರ ಸಾಮಾಜಿಕ ಹಾಗೂ ನೈತಿಕ ಜವಾಬ್ದಾರಿ. ಅವರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರಿಗೆ ಗೌರವಯುತ ಜೀವನವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಕುಟುಂಬದಲ್ಲಿ ಹಿರಿಯರಿಗೆ ಪ್ರೀತಿ, ಕಾಳಜಿ ಮತ್ತು ಸುರಕ್ಷಿತ ವಾತಾವರಣ ಒದಗಿಸಿದಾಗ ಮಾತ್ರ ಸದೃಢ ಹಾಗೂ ಮೌಲ್ಯಾಧಾರಿತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದಂತೆ ದಾಖಲಾದ ಒಟ್ಟು 183 ಪ್ರಕರಣಗಳ ಪೈಕಿ 160 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಗೊಳಿಸಲಾಗಿದೆ. ಉಳಿದ 23 ಪ್ರಕರಣಗಳ ವಿಚಾರಣೆ ಪ್ರಗತಿಯಲ್ಲಿದೆ. ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆ, ಅವರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಹಾಗೂ ಕಾನೂನುಬದ್ಧ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ದೊರೆಯುವಂತೆ ನ್ಯಾಯಾಂಗ ಮತ್ತು ಕಾನೂನು ಸೇವಾ ಸಂಸ್ಥೆಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಕುಟುಂಬ ಸದಸ್ಯರು ಹಿರಿಯರನ್ನು ಗೌರವ ಮತ್ತು ಪ್ರೀತಿಯಿಂದ ಕಾಣಬೇಕು. ಅವರ ಸುರಕ್ಷತೆ, ಆರೋಗ್ಯ, ಸ್ವಾಭಿಮಾನ ಹಾಗೂ ಮಾನವೀಯ ಮೌಲ್ಯಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕೆಂದು ಎಂದರು.
ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಸಂಬಅಧಿಸಿದ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸಿ ಅವರನ್ನು ಸನ್ಮಾರ್ಗದಲ್ಲಿ ಬೆಳೆಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೆ ಪಾಲಕರು ಅಗತ್ಯ ನಿಗಾ ವಹಿಸುವುದರೊಂದಿಗೆ ಮಕ್ಕಳೊಂದಿಗೆ ನಿರಂತರ ಸಂವಾದ ನಡೆಸಬೇಕು. ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವನ್ನು ನೀಡಿದಾಗ ಮಾತ್ರ ಆರೋಗ್ಯಕರ, ಸುರಕ್ಷಿತ ಮತ್ತು ಮೌಲ್ಯಾಧಾರಿತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಆಧುನಿಕ ಸಮಾಜದಲ್ಲಿ ಬಾಂಧವ್ಯ, ಸ್ನೇಹ ಹಾಗೂ ಮಮತೆಯಂತಹ ಮಾನವೀಯ ಮೌಲ್ಯಗಳು ಕ್ರಮೇಣ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಹಿರಿಯ ನಾಗರಿಕರಿಗೆ ಸೂಕ್ತ ಗೌರವ, ಸ್ಥಾನಮಾನ ಮತ್ತು ಆರೈಕೆ ದೊರೆಯುವಂತೆ ಪ್ರತಿಯೊಬ್ಬ ಮಗುವೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಿರಿಯರು ಜೀವನದಲ್ಲಿ ಸಂಪಾದಿಸಿರುವ ಅಪಾರ ಜ್ಞಾನ, ಅನುಭವ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಧಾರೆ ಎರೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಅವರ ಅನುಭವದ ಸಂಪತ್ತನ್ನು ಯುವಜನತೆ ಸದುಪಯೋಗಪಡಿಸಿಕೊಂಡಾಗ ಮಾತ್ರ ಕುಟುಂಬ ಹಾಗೂ ಸಮಾಜದ ಬಲ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ, ಉಪವಿಭಾಗಾಧಿಕಾರಿಗಳಾದ ಎಂ.ಶಿವಮೂರ್ತಿ, ಶ್ರೀನಿವಾಸ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸಿ.ಗೀತಾಲಕ್ಷ್ಮೀ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಸತ್ಯಾನಂದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net