ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಡಿ

ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಿ.ಪಿ.ರಾಜು, ಬಿ.ಸಿ.ರವಿ, ಡಾ.ಟಿ.ಶ್ರೀನಿವಾಸ್ ಇತರರಿದ್ದರು.
ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಿ.ಪಿ.ರಾಜು, ಬಿ.ಸಿ.ರವಿ, ಡಾ.ಟಿ.ಶ್ರೀನಿವಾಸ್ ಇತರರಿದ್ದರು.
Published on
ಹಲಗೂರು: ಹಳ್ಳಿಗಾಡು ಪ್ರದೇಶದ ಮಕ್ಕಳು ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ್ದೇವೆ ಎಂಬ ಕೀಳರಿಮೆ ಬಿಡಿ. ನೀವು ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರೂ ಉನ್ನತ ಸರ್ಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಳವಳ್ಳಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಹೇಳಿದರು.
ಚನ್ನಪಟ್ಟಣ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಾಲೆಗಳ ಮಕ್ಕಳಿಗೆ ಪುಸ್ತಕವೇ ಪ್ರಪಂಚ. ಹಳ್ಳಿಗಾಡಿನ ಮಕ್ಕಳಿಗೆ ಪುಸ್ತಕದ ಜತೆಗೆ ಜೀವನದ ಅರಿವು ಸಿಗಲಿದೆ. ನಿಮ್ಮ ಭವಿಷ್ಯಕ್ಕೆ ನೀವೇ ಶಿಲ್ಪಿಗಳು ಎಂದರು.
ಎಸ್‌ಎಸ್‌ಎಸ್ ಸಂಚಾಲಕ ಬಿ.ಸಿ.ರವಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಲ್ಲಿ ಹಳ್ಳಿಯ ಜನರಿಗೆ ಭ್ರೂಣ ಹತ್ಯೆ, ಬಾಲ್ಯ ವಿವಾಹ ಕುರಿತು ಅರಿವು ಮೂಡಿಸಿದ್ದೇವೆ ಎಂದರು.
ಕ್ರೀಡಾ ವಿಭಾಗದ ಸಂಚಾಲಕ ಡಾ.ಟಿ.ಶ್ರೀನಿವಾಸ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ಹೇಳಿದರು.
ಕ್ರೀಡೆಯಲ್ಲಿ ವಿಜೇತರಾದವರು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಾಲ್ಗೊಂಡಿದ್ದವರಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಆಲಂಗೂರು ಮಂಜುನಾಥ್, ಡಾ.ಶಂಕರೇಗೌಡ, ಸುಧಾ ಬಿದರಿ, ಸೀಮಾ ಕೌಸರ್, ತಾರಾ ಜಯಲಕ್ಷ್ಮೀ, ಗುರುಪ್ರಸಾದ್, ಎ.ಎಸ್.ಕುಮಾರಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net