ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

ಪಾಂಡವಪುರ ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಪಾಂಡವಪುರ ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ
ಪಾಂಡವಪುರ: ಬೇಸಿಗೆ ಪ್ರಾರಂಭವಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬೇಸಿಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿಗಳ ಟಾಸ್ಕ್‌ಫೋರ್ಸ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ ನೀರಿನ ಬವಣೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು. ಬೇಸಿಗೆ ಕಾರಣಕ್ಕೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಮುಂಜಾಗ್ರತೆಯಾಗಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅರಿತು ಅಧಿಕಾರಿಗಳು ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೊಳವೆ ಬಾವಿಗಳು, ಕೆರೆ-ಕಟ್ಟೆಗಳು ಬತ್ತಿ ಹೋಗಿ ಬೇಸಿಗೆ ಕಾರಣಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಸೇರಿದಂತೆ ಬೇಸಿಗೆಯಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಪಂ ಇಒ ವೀಣಾ, ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾ.ಪಂ ಪಿಡಿಒಗಳು, ಸೆಸ್ಕ್ ಇಲಾಖೆ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net