ಅಂಬೇಡ್ಕರ್ ಭವನಕ್ಕೆ ಮೂಲ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ನಿರ್ವಹಣಾ ಸಮಿತಿ ಸಭೆ
  • ಅಧಿಕಾರಿಗಳು ಮತ್ತು ಸಂಘಟನೆ ಮುಖಂಡರು ಭಾಗಿ
ಮಂಡ್ಯ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸುವುದರ ಜತೆಗೆ ವಿದ್ಯುತ್ ವೆಚ್ಚ ಕಡಿತಗೊಳಿಸುವ ಉದ್ದೇಶದಿಂದ ರೂಫ್‌ಟಾಪ್ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭವನದಲ್ಲಿ ಆಯೋಜನೆಯಾಗುವ ಕಾರ್ಯಕ್ರಮಗಳಿಂದ ಸಂಗ್ರಹವಾಗುವ ಬಾಡಿಗೆ ಆದಾಯವನ್ನು ಕಟ್ಟಡದ ಉನ್ನತೀಕರಣ, ಅಗತ್ಯ ಮೂಲಸೌಕರ್ಯದ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಬಳಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭವನಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕು. ಅಲ್ಲದೆ, ಭವನದ ಆವರಣ ಹಾಗೂ ಒಳಾಂಗಣವನ್ನು ಸ್ವಚ್ಛ, ಸುಸಜ್ಜಿತ ಮತ್ತು ಆಕರ್ಷಕವಾಗಿ ನಿರ್ವಹಿಸುವ ಮೂಲಕ ಉತ್ತಮ ವಾತಾವರಣವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಇತ್ತೀಚೆಗೆ ನಿರ್ಮಾಣಗೊಂಡಿರುವ ಮಿನಿ ಸಭಾಂಗಣಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಕಲ್ಪಿಸಬೇಕು. ಅಂತೆಯೇ ಮಿನಿ ಸಭಾಂಗಣಕ್ಕೆ ರಾಮಬಾಯಿ ಅಂಬೇಡ್ಕರ್ ಎಂದು ನಾಮಕರಣ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, 2025-26ನೇ ಸಾಲಿನಲ್ಲಿ ಅಂಬೇಡ್ಕರ್ ಭವನದಲ್ಲಿ ಒಟ್ಟು 49 ಕಾರ್ಯಕ್ರಮ ಆಯೋಜನೆಗೊಂಡಿವೆ. ಅವುಗಳಿಂದ 14,16,219 ರೂ ಬಾಡಿಗೆ ಸಂಗ್ರಹವಾಗಿದೆ. ಈ ಆದಾಯವನ್ನು ವಿದ್ಯುತ್ ನಿರ್ವಹಣೆ, ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ವೇತನ ಪಾವತಿ ಹಾಗೂ ವಿವಿಧ ನಿರ್ವಹಣಾ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್ ಇತರರಿದ್ದರು.

ಕಾಮಗಾರಿ ಗುಣಮಟ್ಟ ಇರಲಿ
ಬಾಬು ಜಗಜೀವನ್ ರಾಂ ಭವನ ನಿರ್ಮಾಣ ಕಾಮಗಾರಿಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ನಿಗದಿತ ಮಾನದಂಡಗಳಂತೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಾಬು ಜಗಜೀವನ್ ರಾಂ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದಾಜು 3.80 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಭವನದ ಸಿವಿಲ್ ಕಾಮಗಾರಿ ಅಂತಿಮ ಹಂತ ತಲುಪಿದೆ. ಪ್ರತಿ ಹಂತದಲ್ಲೂ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಉಪಯೋಗಕ್ಕೆ ಬರುವ ಈ ಕಟ್ಟಡವು ದೀರ್ಘಕಾಲ ಬಾಳಿಕೆ ಬರುವಂತೆ ಮತ್ತು ಉತ್ತಮ ಗುಣಮಟ್ಟದ ಮಾದರಿ ಕಟ್ಟಡವಾಗಿ ರೂಪುಗೊಳ್ಳುವಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.

ಭವನಕ್ಕೆ ಅಗತ್ಯವಿರುವ ಪೀಠೋಪಕರಣ, ಸೌಂಡ್ ಸಿಸ್ಟಮ್ ಸೇರಿದಂತೆ ಇತರೆ ಸೌಲಭ್ಯಗಳನ್ನು ನಿರ್ಮಿತಿ ಕೇಂದ್ರದ ಮೂಲಕ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು. ಕಾಮಗಾರಿಯ ಪೂರ್ಣಗೊಳಿಸುವಿಕೆಯಲ್ಲಿಯೂ ಯಾವುದೇ ನಿರ್ಲಕ್ಷ್ಯ ತೋರದೆ, ನಿಗದಿತ ಅವಧಿಯೊಳಗೆ ಎಲ್ಲ ಕೆಲಸಗಳನ್ನು ಸಮರ್ಪಕವಾಗಿ ಮುಗಿಸಬೇಕು ಎಂದು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net