ಕಾವೇರಿ ನೀರಾವರಿ ನಿಗಮದ ವತಿಯಿಂದ ತಾಲೂಕಿನ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ನಡೆಸಲಾಯಿತು. ಕೆ.ಎಂ.ಉದಯ್, ಗಣೇಶ್, ಎಸ್.ಸಿ.ರಘುರಾಮ, ಹರೀಶ್, ನಾಗರಾಜ್, ಪ್ರಶಾಂತ್ ಇದ್ದರು.
ಮದ್ದೂರು: ಕಾವೇರಿ ನೀರಾವರಿ ನಿಗಮದ ವತಿಯಿಂದ ತಾಲೂಕಿನ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಗುರುವಾರ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಮಂಡ್ಯ ಜಿಲ್ಲೆಯ ಅಭಿಯಂತರರೊಂದಿಗೆ ನಡೆಸಲಾಯಿತು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸಭೆಯಲ್ಲಿ ತಾಲೂಕಿನಲ್ಲಿ ನಡೆಯುತ್ತಿರುವ ಕಾವೇರಿ ನೀರಾವರಿ ನಿಗಮದ ವಿವಿಧ ಕಾಮಗಾರಿಗಳ ಪ್ರಗತಿ, ಆತಗೂರು ಹೋಬಳಿಯ ಏತ ನೀರಾವರಿ ಯೋಜನೆಗಳು, ಬನ್ನಹಳ್ಳಿ ಏತ ನೀರಾವರಿ ಯೋಜನೆ, ಚಿಕ್ಕರಸಿನಕೆರೆ ಏತ ನೀರಾವರಿ ಯೋಜನೆ ಸೇರಿದಂತೆ ಹಲವು ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು ಎಂದರು.
ಯೋಜನೆಗಳ ವೇಗವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳು, ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡೆತಡೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ, ಎಲ್ಲ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ಪರಿಹರಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಹೇಳಿದರು.
ರೈತರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ತಾಲೂಕಿನ ಪ್ರತಿಯೊಂದು ನೀರಾವರಿ ಯೋಜನೆಯೂ ಸಮಯಕ್ಕೆ ಸರಿಯಾಗಿ ಪೂರ್ಣಗೊಂಡು ರೈತರಿಗೆ ಶಾಶ್ವತ ಪ್ರಯೋಜನವಾಗುವಂತೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಿಇ ಗಣೇಶ್, ಎಸ್.ಸಿ.ರಘುರಾಮ, ಎಲೆಕ್ಟ್ರಿಕಲ್ ಎಇಇ ಹರೀಶ್, ಇಇ ನಾಗರಾಜ್, ಪ್ರಶಾಂತ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.