ಸುರಕ್ಷತಾ ನಿಯಮ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on
ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಬಲಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಬಲಮುರಿ ಪ್ರವಾಸಿ ತಾಣದಲ್ಲಿ ನೀರಿಗಿಳಿದು ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಪೊಲೀಸ್ ಮತ್ತು ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮದಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಬಲಮುರಿ ಮತ್ತು ಸುತ್ತಮುತ್ತಲಿನ ಅಪಾಯಕಾರಿ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗೆ ಇಳಿಯುವುದನ್ನು ಮತ್ತು ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಗೂ ಸುರಕ್ಷತೆ ಇಲ್ಲದ ತೆಪ್ಪ ಬಳಸುವುದು ನಿಷೇಧಿಸಿದೆ. ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ, ತಹಸೀಲ್ದಾರ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಸಮಿತಿ ರಚಿಸಲಾಗಿದೆ. ಎಚ್ಚರಿಕೆ ಫಲಕಗಳ ಅಳವಡಿಕೆ ನದಿಯ ನೀರಿನ ತೀವ್ರತೆ ಹಾಗೂ ನೀರಿನ ಆಳದ ಅರಿವಿಲ್ಲದೆ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿರುವುದರಿಂದ, ನದಿ ಪಾತ್ರದ ಅಪಾಯಕಾರಿ ವಲಯಗಳಲ್ಲಿ ದೊಡ್ಡದಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರವಾಸಿಗರಲಿ ಸ್ಧಳದ ಬಗ್ಗೆ ಮಾರ್ಗದರ್ಶನ ನೀಡಲು ಗೃಹ ರಕ್ಷಕ ದಳದ ಸಿಬ್ಬಂದಿ ನೇಮಕ ಮಾಡಬೇಕು. ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಧ್ವನಿವರ್ಧಕ ಮೂಲಕ ಪ್ರವಾಸಿಗರಿಗೆ ಮಾಹಿತಿ ನೀಡಬೇಕು. ನದಿಯ ಆಳ ಹಾಗೂ ಸುಳಿಗಳಿರುವ ಅಪಾಯಕಾರಿ ಜಾಗಗಳ ಬಳಿ ಯಾರಾದರೂ ಪ್ರವಾಸಿಗರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸ್ಥಳೀಯ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ನದಿಯ ತಟದಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಲು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಬೇಕು. ಬಲಮುರಿಯಲ್ಲಿ ಪೊಲೀಸರು ನಿರಂತರ ನಿಗಾ ವಹಿಸುತ್ತಾರೆ ಎಂದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ವೆಂಕಟರಮಣಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net