ಕೈಗಾರಿಕೆಗೆ ನಾವ್ಯಾರೂ ಭೂಮಿ ಕೊಡಲ್ಲ: ನೊದೆಕೊಪ್ಪಲು, ಎಲೆಕಚಾಕನಹಳ್ಳಿ ರೈತರ ಸ್ಪಷ್ಟನುಡಿ

ಮಂಡ್ಯ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿಯೊಂದಿಗಿನ ಸಭೆ ವಿಫಲ
  • ಜಿಪಂ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜನೆ
ಮಂಡ್ಯ: ಕೈಗಾರಿಕೆ ಸ್ಥಾಪನೆ ಹಿನ್ನೆಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಂಡ್ಯ ತಾಲೂಕು ನೊದೆಕೊಪ್ಪಲು, ಎಲೆಚಾಕನಹಳ್ಳಿ ಹಾಗೂ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಕುದುರಗುಂಡಿ ಗ್ರಾಮದ ರೈತರ ಅಭಿಪ್ರಾಯ ಸಂಗ್ರಹಿಸಲು ನಗರದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ ಸಭೆ ವಿಫಲವಾಯಿತು.
ಅಂತೆಯೇ ನೊದೆಕೊಪ್ಪಲು, ಎಲೆಚಾಕನಹಳ್ಳಿ ಗ್ರಾಮದ ರೈತರು ಯಾವುದೇ ಕಾರಣಕ್ಕೂ ಭೂಮಿ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಗೆಜ್ಜಲಗೆರೆ ಮತ್ತು ಕುದುರಗುಂಡಿ, ನೋದೆಕೊಪ್ಪಲು ಗ್ರಾಮದಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಅಭಿಪ್ರಾಯ ಪಡೆಯಲು ಜಿಪಂ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಭೂಮಿಗೆ ನೀಡಲಾಗುವ ಪರಿಹಾರದ ಮೊತ್ತದ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದರೆ ಹೆಚ್ಚು ಪರಿಹಾರ ನೀಡುವಂತೆ ಮನವಿ ಸಲ್ಲಿಸಬಹುದು. ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರವು ಪ್ರಾಥಮಿಕ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ರೈತರು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಲು ಕಾನೂನಾತ್ಮಕ ಅವಕಾಶವಿರುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ನಂತರ ಭೂ ಸ್ವಾಧೀನ ಪ್ರಕ್ರಿಯೆ ಅರ್ಥದಲ್ಲಿ ನಿಂತಿರುವುದರಿಂದ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ನಂತರ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಕೈಗಾರಿಕೆ ಇಲಾಖೆ ಉಪನಿರ್ದೇಶಕ ದಿನೇಶ್ ಇದ್ದರು.

ಸಭೆಯಲ್ಲಿ ರೈತರು ಹೇಳಿದ್ದೇನು?. ಕೃಷಿಯನ್ನೇ ನಂಬಿ ಬದುಕುತ್ತಿರುವ ಕುಟುಂಬಗಳು ಭೂಮಿಯನ್ನು ಕಳೆದುಕೊಂಡರೆ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ಎಂಬುದು ಸಭೆಯಲ್ಲಿ ರೈತರು ಅಭಿಪ್ರಾಯ ವ್ಯಕ್ತಪಡಿಸಿದರು. ಇದು ಅತ್ಯಂತ ಫಲವತ್ತಾದ ಕೃಷಿ ಭೂಮಿಯಾಗಿದ್ದು, ನೀರಾವರಿ ಸೌಲಭ್ಯವನ್ನು ಹೊಂದಿದೆ. ಯಾವುದೇ ಕಾರಣಕ್ಕೂ ಭೂಮಿಯನ್ನು ನೀಡಲು ಆಗುವುದಿಲ್ಲ. ಸರ್ಕಾರವು ಭೂಮಿ ನೀಡುವ ರೈತರಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಪರಿಹಾರ ನೀಡಿದರೆ ಭೂಮಿ ನೀಡುತ್ತೇವೆ ಎಂದು ಕೆಲ ರೈತರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net