ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಕೀಲ ವಿ.ಟಿ.ರವಿಕುಮಾರ್ ಅವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ಡಾ.ಬಿ.ಕೃಷ್ಣ, ಶಂಕರಯ್ಯ, ದೊರೆಸ್ವಾಮಿ, ತಿಪ್ಪೂರು ರಾಜೇಶ್, ಶಿವಪ್ಪ, ಶಿವರಾಮು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಕೀಲ ವಿ.ಟಿ.ರವಿಕುಮಾರ್ ಅಧ್ಯಕ್ಷ
ಮದ್ದೂರು: ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘಕ್ಕೆ ನೂತನ ತಾಲೂಕು ಅಧ್ಯಕ್ಷರಾಗಿ ವಕೀಲ ವಿ.ಟಿ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಡಿ.ಪಿ.ಶಿವಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಬಳಿಕ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ವಿ.ಟಿ.ರವಿಕುಮಾರ್, ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಸಮುದಾಯವನ್ನು ಸಂಘಟಿಸುವ ನಿಟ್ಟಿನಲ್ಲಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯದ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.
ತಮ್ಮ ಅಧಿಕಾರದ ಅವಧಿಯಲ್ಲಿ ನಗರದ ವ್ಯಾಪ್ತಿಯಲ್ಲಿ ಸಂಘದ ಸ್ವಂತ ನಿವೇಶನವನ್ನು ಒದಗಿಸಲು ಶಾಸಕ ಕೆ.ಎಂ.ಉದಯ್ ಅವರಿಗೆ ಮನವಿ ಸಲ್ಲಿಸುವ ಜತೆಗೆ ನೂತನ ಕಟ್ಟಡವನ್ನು ನಿರ್ಮಿಸಿ ಸಮುದಾಯದ ಏಳಿಗೆಗೆ ಹಗಲಿರುಳು ಶ್ರಮಿಸುವುದಾಗಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘಟನೆ ಈಗಾಗಲೇ ತಾಲೂಕಿನಾದ್ಯಂತ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಜತೆಗೆ ಒಕ್ಕಲಿಗ ಸಮುದಾಯದವರಿಗೆ ಅನ್ಯಾಯವಾದಾಗ ಬೀದಿಗಿಳಿದು ಪ್ರತಿಭಟನೆ ನಡೆಸಿ ಆಡಳಿತ ನಡೆಸುವ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದು ಮುಂದಿನ ದಿನಗಳಲ್ಲೂ ಸಮುದಾಯದ ಶ್ರೇಯೋಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವುದಾಗಿ ಹೇಳಿದರು.
ಸಂಘಟನೆ ಕೇವಲ ಜಯಂತಿಗಳ ಆಚರಣೆಗಷ್ಟೇ ಸೀಮಿತವಾಗದೆ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯದ ಮಕ್ಕಳಿಗೆ ಆರ್ಥಿಕ ನೆರವು, ಪರಿಸರ ಸಂರಕ್ಷಣೆ, ಆರೋಗ್ಯ ಶಿಬಿರ, ಮಹಾತ್ಮರ ಜಯಂತಿ ಆಚರಣೆ ಇನ್ನಿತರ ಕಾರ್ಯಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು.