ನಾಲ್ವಡಿಯವರು ಯುವಜನರಿಗೆ ಸದಾ ಸ್ಫೂರ್ತಿ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಬಣ್ಣನೆ

ಮಂಡ್ಯದಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಉದ್ಘಾಟಿಸಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಜಯಂತಿ ಆಚರಣೆ
  • ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ
ಮಂಡ್ಯ: ಯುವಕರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ, ಶಿಕ್ಷಣ ಪರತೆ ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಅವರು ಆಧುನಿಕ ಮೈಸೂರು ಸಂಸ್ಥಾನದ ನಿರ್ಮಾತೃ ಆಗಿದ್ದು, ಯುವಜನರಿಗೆ ಅವರ ಆದರ್ಶಗಳು ಸದಾ ಸ್ಫೂರ್ತಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಮತ್ತು ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ರೈತರ ಕೃಷಿಗೆ ಅನುಕೂಲವಾಗಲು ಕಾವೇರಿ ನದಿಗೆ ಅಣೆಕಟ್ಟೆ ನಿರ್ಮಿಸಿದರು. ಈ ಮೂಲಕ ರೈತರ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಿ ಅಪಾರ ಕೊಡುಗೆ ನೀಡಿದ್ದಾರೆ. ಏಷ್ಯಾದ ಮೊದಲ ಜಲವಿದ್ಯುತ್ ಕೇಂದ್ರವಾದ ಶಿವನಸಮುದ್ರ ಯೋಜನೆ ಆರಂಭಿಸಿ ಮೈಸೂರು ಸಂಸ್ಥಾನಕ್ಕೆ ವಿದ್ಯುತ್ ಒದಗಿಸಿದರು ಎಂದು ತಿಳಿಸಿದರು.
ಎಲ್ಲರೂ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಮೈಸೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಿ. ಎಲ್ಲ ಮಹಿಳೆಯರಿಗೆ ಉಚಿತ ಶಿಕ್ಷಣ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಕಲ್ಪಿಸಿದವರು. ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ, ಕಾಗದದ ಕಾರ್ಖಾನೆಗಳನ್ನು ಸ್ಥಾಪಿಸಿ ನಾಡಿನ ಅಭಿವೃದ್ಧಿಗೆ ಶ್ರಮಿಸಿದವರು ಎಂದು ಹೇಳಿದರು.
ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದ ಅವಧಿಯಲ್ಲಿ 1918ರ ಆ.3ರಂದು ನಾಲ್ವಡಿ ಅವರು ಸರ್ ಲೆಸ್ಲಿ ಮಿಲ್ಲರ್ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವೊಂದನ್ನು ರಚಿಸಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಶೋಷಿತರಿಗೆ ಸಮಾನತೆ, ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಾಮಾಜಿಕ, ಆರ್ಥಿಕವಾಗಿ ಸಬಲರನ್ನಾಗಿಸಲು ಮೀಸಲಾತಿಯನ್ನು ಜಾರಿಗೆ ತಂದವರು ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲ ಮ.ರಾಮಕೃಷ್ಣ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 24ನೇ ಮೈಸೂರು ಸಂಸ್ಥಾನದ ಒಡೆಯರಾಗಿದ್ದರು. ಅವರು ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯಾದ ಶಿವನಸಮುದ್ರ ಜಲವಿದ್ಯುತ್ ಯೋಜನೆಯನ್ನು 1902ರಲ್ಲಿ ಆರಂಭಿಸಿದರು. ಭದ್ರಾವತಿ ಉಕ್ಕಿನ ಕಾರ್ಖಾನೆ(ವಿಐಎಸ್‌ಎಲ್), ಮೈಸೂರು ಸ್ಯಾಂಡಲ್‌ವುಡ್, ಆಯಿಲ್ ಫ್ಯಾಕ್ಟರಿ ಮತ್ತು ಮೈಸೂರು ಪೇಪರ್ ಮಿಲ್‌ಗಳನ್ನು ಸ್ಥಾಪಿಸಿದರು. ಬೆಂಗಳೂರು ನಗರಕ್ಕೆ 1905ರಲ್ಲಿ ಏಷ್ಯಾದಲ್ಲೇ ಮೊದಲು ವಿದ್ಯುತ್ ದೀಪಗಳನ್ನು ಅಳವಡಿಸಲಾಯಿತು ಎಂದು ತಿಳಿಸಿದರು.
ಸತ್ಕೀರ್ತಿನಾಥ ಸ್ವಾಮೀಜಿ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ಪಿ.ಪ್ರಕಾಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಡಿಡಿಪಿಐ ಲೋಕೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್‌ನ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಧ್ಯಕ್ಷ ಎಲ್.ಸಂದೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚಲುವಯ್ಯ ಇತರರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಆವರಣದಲ್ಲಿ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಲಂಕೃತ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅವರು ಚಾಲನೆ ನೀಡಿದರು. ವಿವಿಧ ಕಲಾ ತಂಡಗಳ ಮೂಲಕ ಜಿಲ್ಲಾ ಕಚೇರಿಯಿಂದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತ, ವಿ.ವಿ. ರಸ್ತೆ ಮೂಲಕ ಅಂಬೇಡ್ಕರ್ ಭವನ ತಲುಪಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net