ಅಸ್ಪೃಶ್ಯತೆ ಆಚರಣೆ ಸಾಮಾಜಿಕ ಪಿಡುಗು: ಜಿಲ್ಲಾಧಿಕಾರಿ ಡಾ.ಕುಮಾರ ಬೇಸರ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯಲ್ಲಿ ವರ್ಷಕ್ಕೆ ಸರಾಸರಿ 65 ರಿಂದ 70 ದಾಖಲು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆ
  • ಅರಿವು ಮೂಡಿಸಲು ಕಾರ್ಯಕ್ರಮ
ಮಂಡ್ಯ: ಜಿಲ್ಲೆಯಲ್ಲಿ ವರ್ಷಕ್ಕೆ ಸರಾಸರಿ 65 ರಿಂದ 70 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿವೆ. ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ನಡೆಯುತ್ತಿರುವುದು ಸಾಮಾಜಿಕ ಪಿಡುಗು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989(ತಿದ್ದುಪಡಿ) ಅಧಿನಿಯಮ 2015 ಮತ್ತು ನಿಯಮಗಳ 1995(ತಿದ್ದುಪಡಿ) ನಿಯಮಗಳು 2016 ಮತ್ತು ನಾಗರಿಕ ಹಕ್ಕು ರಕ್ಷಣಾ ಕಾಯ್ದೆ 1955ರಂತೆ ಸರ್ಕಾರೇತರ ಸಂಘ/ಸಂಸ್ಥೆಗಳ ಸಮನ್ವಯದೊಂದಿಗೆ ಜಾಗೃತಿ/ಅರಿವು ಮೂಡಿಸಲು ವಿಚಾರಗೋಷ್ಠಿ/ಕಾರ್ಯಾಗಾರ ಮತ್ತು ಇತರೆ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯ ತೀವ್ರತೆ ತಿಳಿಯದೆ ಅರಿವಿನ ಕೊರತೆಯಿಂದ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದೆ. ಜಿಲ್ಲೆಯ ಎಲ್ಲ ನೋಂದಾಯಿತ ಪ್ರಗತಿಪರ ಸಂಘ ಸಂಸ್ಥೆಗಳನ್ನು ಒಳಗೊಂಡಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಪ್ರತಿಬಂಧ) ಕಾಯ್ದೆಯ ಕುರಿತಾಗಿ ಅರಿವಿನ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ದೌರ್ಜನ್ಯ ಪ್ರಕರಣಗಳನ್ನು ಕೇವಲ ಕಾನೂನಿನಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಎಲ್ಲರಲ್ಲೂ ಸಮಾನತೆ ಮನೋಭಾವನೆ ಮತ್ತು ಮನುಷ್ಯತ್ವ ಇದ್ದಾಗ ಮಾತ್ರ ಇಂತಹ ಅನಿಷ್ಟ ಪದ್ಧತಿಗಳನ್ನು ಸಮಾಜದಿಂದ ಸಂಪೂರ್ಣವಾಗಿ ತೆಗೆದು ಹಾಕಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಾಗಾರ ಮತ್ತು ವಿಚಾರಗೋಷ್ಠಿಯನ್ನು ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಚಿವರ ಉಪಸ್ಥಿತಿಯಲ್ಲಿ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ನಡೆಸೋಣ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆದು ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಮುಖಂಡರಿಗೂ ಇದರ ಕುರಿತಾಗಿ ಅರಿವು ಮೂಡಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿ ಹೇಳುವವರಿಗೆ ಧೈರ್ಯ ತುಂಬುವ ಕೆಲಸವಾಗಬೇಕು. ಸಾಕ್ಷಿದಾರಿಗೆ ಸದರಿ ದಿನದ ಕೂಲಿ ಮೊತ್ತವನ್ನು ಟಿ.ಎ, ಡಿ.ಎ ರೂಪದಲ್ಲಿ ನೀಡಲಾಗುತ್ತದೆ. ಆದರ ಕುರಿತಾಗಿಯೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದ ಎಲ್ಲ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಕುರಿತಾಗಿ ಮೊದಲು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಬೇಕು. ಪೊಲೀಸ್ ಠಾಣೆಗಳಲ್ಲಿ ಹೇಗೆ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದು ಎಂಬುದರ ಕುರಿತಾಗಿ ಒಂದು ವಿಶೇಷ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಹೇಳಿದರು.
ಪರಿಶಿಷ್ಟರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಕುರಿತು ಅರಿವು ಕಾರ್ಯಕ್ರಮ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಂಶಗಳ ಫಲಕವನ್ನು ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳನ್ನು ಡಿವೈಎಸ್ಪಿ ಹಂತದಲ್ಲಿ ತನಿಖೆ ನಡೆಸಬೇಕು. ನಮ್ಮ ಜಿಲ್ಲೆಯಲ್ಲಿ ನಡೆಸಲಾಗುವ ಸದರಿ ಕಾರ್ಯಕ್ರಮವನ್ನು ಇತರ ಜಿಲ್ಲೆಗೆ ಮಾದರಿಯಾಗುವಂತೆ ನಡೆಸೋಣ ಎಂದು ಹೇಳಿದರು.
ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net