ಮಾ.23ರಿಂದ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಮಾ.28ರಂದು ವೈರಮುಡಿ ಕಿರೀಟ ಧಾರಣೆ
  • ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ
ಮಂಡ್ಯ: ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾ.23ರಿಂದ ಏ.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾ.28ರಂದು ಜರುಗಲಿದು, ವೈರಮುಡಿ ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿಭದ್ರತೆ ಒದಗಿಸಬೇಕು. ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರೌವೃತ್ತರಾಗಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು.
.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕುಡಿಯುವ ನೀರು, ಶೌಚಗೃಹ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ರಸ್ತೆ ಸಾರಿಗೆ ವ್ಯವಸ್ಥೆ ಮತ್ತು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net