ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಸಲಹೆ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ
  • ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿ
ಮಂಡ್ಯ: ಮುಂಗಾರು ವಿಳಂಬ ಮತ್ತು ಬರ ಪರಿಸ್ಥಿತಿಯನ್ನು ನಿರ್ವಹಿಸಲು ಜಿಲ್ಲೆಯಲ್ಲಿ ಪರ್ಯಾಯ ಬೆಳೆ ಬಿತ್ತನೆ ಮಾಡಲು ರೈತರಿಗೆ ಸಲಹೆ ನೀಡಬೇಕು. ಅಂತೆಯೇ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳುವಂತೆ ಮಾಹಿತಿ ಕೊಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ರೈತರು ಬೆಳೆ ವಿಮೆಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಮಾತ್ರವಲ್ಲದೆ ಗರಿಷ್ಟ ಪ್ರಮಾಣದ ರೈತರು ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಇದಲ್ಲದೆ ಪೌತಿ ಖಾತೆ ಆಂದೋಲನ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ, ಸಮರ್ಪಕವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸಲು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ ಎಂದು ಸ್ಪಷ್ಟ ಸೂಚನೆ ನೀಡಿದರು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಜಿಲ್ಲೆಯಲ್ಲಿ ಆರಂಭವಾಗಿದ್ದು, ಜು.29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ, ಎನುಮರೇಷನ್ ಅರ್ಜಿಯನ್ನು ಭರ್ತಿ ಮಾಡಿಕೊಡುವಂತೆ ತಿಳಿಸಲು ಅಗತ್ಯ ಅರಿವು ಮೂಡಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ 15 ಲಕ್ಷ ಮತದಾರರು ಇದ್ದು, ಆನ್‌ಲೈನ್ ಮೂಲಕ ಎಸ್‌ಐಆರ್ ಫಾರಂ ಭರ್ತಿ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಮುಂಗಾರು ಮಳೆ ವೈಫಲ್ಯದಿಂದ ಜಿಲ್ಲೆಯಲ್ಲಿ ಶೇ.28ರಷ್ಟು ಮಳೆ ಕೊರತೆ ಉಂಟಾಗಿದೆ. ಈ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಮಳೆ ಕೊರತೆಯಾಗಿದೆ. ಅಲಸಂದೆ, ತೊಗರಿ, ಹೆಸರು ಮುಂತಾದ ಬೆಳೆಗಳ ಬಿತ್ತನೆಗೂ ಸಹಾ ನೀರಿನ ಕೊರತೆ ಉಂಟಾಗಿದೆ. ಮಾತ್ರವಲ್ಲದೆ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳಾದ ಮುಸುಕಿನಜೋಳ, ತೊಗರಿ, ಉದ್ದು, ಹೆಸರು, ಅಲಸಂದೆ, ಎಳ್ಳು, ಹರಳು ಮುಂತಾದ ಬೆಳೆಗಳ ನಿಗದಿತ ಬಿತ್ತನೆ ಕ್ಷೇತ್ರದ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದರು.
ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 81 ಅಡಿಗೆ ಇಳಿಕೆಯಾಗಿದೆ. ಹಿಂದಿನ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಇಲ್ಲದ ಕಾರಣ ಕೃಷಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಈಗ ಲಭ್ಯವಿರುವ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೃಷಿ ಇಲಾಖೆಯು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಮಾರ್ಗದರ್ಶನ ನೀಡುತ್ತಿದೆ. ಮುಂಗಾರು ಮಳೆ ವೈಫಲ್ಯ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ನಷ್ಟವಾಗದಂತೆ ತಡೆಯಲು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದ್ದು, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೃಷಿ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಮುಂಗಾರು ಪರಿಸ್ಥಿತಿ, ಮಳೆಯ ಕೊರತೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು.

289 ಗ್ರಾಮಕ್ಕೆ ಕುಡಿವ ನೀರಿನ ಸಮಸ್ಯೆ
ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲದ ಪರಿಣಾಮ ಮುಂದೆ ಎದುರಾಗಬಹುದಾದ ಕುಡಿಯುವ ನೀರಿಗೂ ಸಮಸ್ಯೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ಮಾಡಲಾಯಿತು. ಜನರಿಗೆ ಸಮಸ್ಯೆಯಾಗದಂತೆ ಕುಡಿವ ನೀರಿನ ನಿರ್ವಹಣೆ ಕುರಿತು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ವಿಷಯ ಪ್ರಸ್ತಾಪಿಸಲಾಯಿತು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ 289 ಗ್ರಾಮಗಳಿಗೆ ಎದುರಾಗಬಹುದಾಗಿದೆ. ಆದರಿಂದ ಪೂರ್ವಭಾವಿಯಾಗಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 167 ಬೋರ್‌ವೆಲ್ಗಳಲ್ಲಿ ನೀರಿನ ಇಳುವರಿ ಕಡಿಮೆ ಆಗುತ್ತಿದೆ. ಅದಕ್ಕೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಅಭಾವ ಎದುರಿಸಬಹುದಾದ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಉದ್ದೇಶಿಸಲಾಗಿದೆ ಎಂದರು.
ಇದಲ್ಲದೆ ಜಿಲ್ಲಾಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ನೀರಿಗೆ ಸಂಬಂಧಿಸಿದ ದೂರುಗಳನ್ನು ಇಲ್ಲಿಗೆ ಸಲ್ಲಿಸಬಹುದು. ಈ ಮೂಲಕ ಪರಿಹರಿಸಿಕೊಳ್ಳಬಹುದು. ಮಾತ್ರವಲ್ಲದೆ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸರಿಯಾಗಿ ಮಾಡುವಂತೆ ಮತ್ತು ಕುಡಿವ ನೀರು ಪೂರೈಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಪಿಡಿಒಗಳಿಗೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net