ಮಂಡ್ಯ:ಹೇಮಾವತಿ ಜಲಾಶಯ ಯೋಜನೆಯ ನಾಲಾ ನಿರ್ಮಾಣದ ಉದ್ದೇಶಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಂಡು 20 ವರ್ಷ ಕಳೆದರೂ ವೈಜ್ಞಾನಿಕ ಪರಿಹಾರ ನೀಡದೆ ತಾರತಮ್ಯ ಮಾಡಿರುವುದನ್ನು ಸರಿಪಡಿಸುವಂತೆ ಒತ್ತಾಯಿಸಿ ಕೆ.ಆರ್.ಪೇಟೆ ತಾಲೂಕಿನ ವಿವಿಧ ಗ್ರಾಮದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೊಸಹೊಳಲು, ಮಣಿಗನಹಳ್ಳಿ, ಬಳ್ಳೇಕೆರೆ, ಹೊಸಹಳ್ಳಿ ಸೇರಿದಂತೆ ಹಲವಾರು ಗ್ರಾಮದಿಂದ ರೈತರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಧಾವಿಸಿ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಅಂತೆಯೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹೇಮಾವತಿ ನಾಲಾ ನಿರ್ಮಾಣಕ್ಕಾಗಿ ನಮ್ಮ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಲ್ಪ ಪ್ರಮಾಣದ ಪರಿಹಾರ ನೀಡಿದ್ದರು. ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸಿ ನಾವು 20 ವರ್ಷದಿಂದಲೂ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ಹೆಚ್ಚಿನ ಪರಿಹಾರ ನೀಡುವಂತೆ ಆದೇಶ ನೀಡಿದ್ದರೂ ಸಹ ನೀರಾವರಿ ಇಲಾಖೆ ಅಧಿಕಾರಿಗಳು ಯಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೆ ಪರಿಹಾರವನ್ನೂ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಸುಮಾರು 8 ರಿಂದ 10 ಬಾರಿ ತಾಲೂಕು ಕಚೇರಿ, ಹೇಮಾವತಿ ನೀರಾವರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಬಳಿಯೂ ನಾವು ಪ್ರತಿಭಟನೆ ನಡೆಸಿದ್ದೇವೆ. ಆದರೂ ಪರಿಹಾರ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾಧಿಕಾರಿಗೂ ಸಹ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಿದ ಪ್ರತಿಭಟನಾಕಾರರು, ತಕ್ಷಣ ನ್ಯಾಯಾಲಯದ ಆದೇಶದಂತೆ ಹೆಚ್ಚಿನ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದರು. ಅಂತೆಯೇ ಈ ಪ್ರತಿಭಟನೆಯ ನಂತರವೂ ನಮಗೆ ನ್ಯಾಯಾ ದೊರಕಿಸಿಕೊಡುವ ಪ್ರಯತ್ನ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.