ವೈರಮುಡಿ ಬ್ರಹ್ಮೋತ್ಸವಕ್ಕೆ ಮೂಲ ಸೌಕರ್ಯ ಒದಗಿಸಿ

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ  ಶಾಸಕ ದರ್ಶನ್ ಪುಟ್ಟಣ್ಣಯ್ಯಬುಧವಾರ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯಬುಧವಾರ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
Published on
ಮೇಲುಕೋಟೆ: ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚಿಸಿದರು.
ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಬುಧವಾರ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚಿಸಿದರು.
ಶೌಚಗೃಹ, ವೈದ್ಯಕೀಯ ಸೌಲಭ್ಯ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಉತ್ಸವದ ಮೆರವಣಿಗೆ ಸುಗಮವಾಗಿ ಸಾಗಲು ಬ್ಯಾರಿಕೇಡ್‌ಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಶ್ರೀ ಚೆಲುವನಾರಾಯಣಸ್ವಾಮಿಗೆ ವಜ್ರ ಖಚಿತ ಕಿರೀಟಧಾರಣೆ ಮಾಡಿ, ರತ್ನಖಚಿತ ಆಭರಣಗಳಿಂದ ಅಲಂಕರಿಸಿ, ಉತ್ಸವ ನೆರವೇರಿಸಲಾಗುತ್ತದೆ. ಉತ್ಸವ ನಡೆಯುವ ಇಡೀ ರಾತ್ರಿ ದೇವರ ದರ್ಶನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಬ್ಯಾರಿಕೇಡ್ ವ್ಯವಸ್ಥೆ ಅಳವಡಿಸಬೇಕು ಹಾಗೂ ದೇವಸ್ಥಾನ ಒಳಗೆ ಮಾಧ್ಯಮದವರಿಗೆ ಪ್ರತ್ಯೇಕ ಗ್ಯಾಲರಿ ಮಾಡುವಂತೆ ಸೂಚಿಸಿದರು.
ಏ.1ರಂದು ಮೇಲುಕೋಟೆಯ ಪುರಾಣ ಪ್ರಸಿದ್ಧ ಪಂಚ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಯುವುದರಿಂದ ಕಲ್ಯಾಣಿಯನ್ನು ವೀಕ್ಷಣೆ ಮಾಡಿ ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕು ಹಾಗೂ ಭಕ್ತರಿಗೆ ಸ್ನಾನ ಗೃಹ ಮತ್ತು ತಾತ್ಕಾಲಿಕ ಶೌಚಗೃಹದ ವ್ಯವಸ್ಥೆ ಹಾಗೂ ಲೈಟಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಮೇಲುಕೋಟೆ ಎಸ್‌ಇಟಿ ತಾಂತ್ರಿಕ ಶಿಕ್ಷಣ ಸಂಸ್ಥೆ ಹಿಂಭಾಗ ನಾಲ್ಕು ಚಕ್ರದ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ಲೈಟಿಂಗ್ ವ್ಯವಸ್ಥೆ, ಪಾರ್ಕಿಂಗ್ ಸ್ಥಳಗಳಲ್ಲಿ ಶೌಚಗೃಹಗಳನ್ನು ನಿರ್ಮಿಸಿ ಸೂಚನಾ ಫಲಕ ಹಾಕಬೇಕು ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.
ಮಾ.28ರಂದು ಆರೋಗ್ಯ ಅಧಿಕಾರಿಗಳು ದೇವಸ್ಥಾನ, ಪಾರ್ಕಿಂಗ್, ದಾಸೋಹ ಭವನದ 3 ಕಡೆ ಗ್ಯಾಲರಿ ಮಾಡಿ ಆರೋಗ್ಯ ಅಧಿಕಾರಿಗಳನ್ನು ನೇಮಿಸಬೇಕು ಮತ್ತು ಪ್ರಾಥಮಿಕ ಚಿಕಿತ್ಸೆಯ ಎಲ್ಲ ರೀತಿಯ ಔಷಧಗಳ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಡಾ.ಶೋಭಾರಾಣಿ ವಿ.ಜೆ, ಮುಜರಾಯಿ ಇಲಾಖೆಯ ತಹಸೀಲ್ದಾರ್ ತಮ್ಮಣ್ಣ ಗೌಡ, ಶೀಲಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net