ಬಿಜೆಪಿ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ಮಾತನಾಡಿ, ವಾರದ ಹಿಂದೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸುವುದಾಗಿ ತೀರ್ಮಾನಿಸಿದ ಕಾರಣ ರೈತರು ಪ್ರತಿಭಟನೆ ಕೈಬಿಟ್ಟಿದ್ದರು. ಆದರೆ, ಸಭೆಯ ತೀರ್ಮಾನದಂತೆ ಸರ್ಕಾರ ನಡೆದುಕೊಳ್ಳುತ್ತಿಲ್ಲ. ಜಲಸಂಪನ್ಮೂಲ ಸಚಿವರು ಕೆಆರ್‌ಎಸ್ 100 ಅಡಿ ತಲುಪಿದ ಬಳಿಕ ನಾಲೆಗಳಿಗೆ ನೀರು ಹರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲಿಯವರೆಗೆ ಬೆಳೆಗಳು ಒಣಗಿ ರೈತ ಕಬ್ಬಿಗೆ ಬೆಂಕಿ ಹಾಕುವ ಪರಿಸ್ಥಿತಿ ಬರಬಹುದು. ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರೆ ಇಡೀ ದೇಶ ನಾಶವಾಗುತ್ತದೆ. ಅಣೆಕಟ್ಟೆಯಲ್ಲಿ ಸಾಕಷ್ಟು ನೀರಿದ್ದರೂ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ. ನಾಲೆಗಳಿಗೆ ನೀರು ಹರಿಸದಿದ್ದರೆ ಸರ್ಕಾರ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.