ಹಲಗೂರು: ಇಲ್ಲಿನ ಸಾರಿಗೆ ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಕನಕಪುರ ರಸ್ತೆಯಲ್ಲಿ ಮಳೆ ನೀರು ನಿಂತು ಬಸ್ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಗುರುವಾರ ಬೆಳಗ್ಗೆಯಿಂದಲೇ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆ ಬಂದಾಗಲ್ಲೆಲ್ಲ ಇಲ್ಲಿನ ಸಾರಿಗೆ ಬಸ್ ನಿಲ್ದಾಣ ಮತ್ತು ಕನಕಪುರ ರಸ್ತೆಯಲ್ಲಿ ನೀರುಹರಿದು ಹೋಗುವುದಕ್ಕೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ನಿಲ್ಲುತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.
ಸಾರಿಗೆ ಬಸ್ ನಿಲ್ದಾಣದ ಆಟೋ ಚಾಲಕ ಸುರೇಶ್ ಮಾತನಾಡಿ, ಮಳೆ ಬಂದಾಗಲೆಲ್ಲ ನೀರು ನಿಂತು ಸಾರಿಗೆ ಬಸ್‌ಗಳು ಹಾಗೂ ಸಾರ್ವಜನಿಕರಿಗೆ ಓಡಾಡಲು ತುಂಬ ತೊಂದರೆಯಾಗುತ್ತಿದೆ. ಮಳೆ ನೀರು ತುಂಬ ದಿನಗಳು ಇಲ್ಲೇ ನಿಲ್ಲುವುದರಿಂದ ಸೊಳ್ಳೆಗಳು ಜಾಸ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದುದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಾರಿಗೆ ಬಸ್ ನಿಲ್ದಾಣ ಹಾಗೂ ಕನಕಪುರ ರಸ್ತೆಯಲ್ಲಿ ನೀರು ನಿಲ್ಲದಂತೆ ಸೂಕ್ತ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.
ಸುರೇಶ, ಗಿರೀಶ, ಪ್ರವೀಣ, ರವಿ ,ಪ್ರಭು ಸೇರಿದಂತೆ ಇತರರು ಇದ್ದರು.