ಇಂಗ್ಲಿಷ್ ವ್ಯಾಮೋಹ ಬಿಡಿ ಸರ್ಕಾರಿ ಶಾಲೆ ಉಳಿಸಿ

ಮದ್ದೂರು ತಾಲೂಕಿನ ಕೆಸ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಸೈಕಲ್ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಮಲ್ಲೇಶ್ ಗೂರೂಜಿ, ಧನಂಜಯ, ಪಿ.ಸಂದರ್ಶ, ಹರೀಶ್ ಬಾಬು, ವಿನೋದ್‌ಬಾಬು, ದಾಸೇಗೌಡ, ನಾಗೇಗೌಡ ಇದ್ದರು.
ಮದ್ದೂರು ತಾಲೂಕಿನ ಕೆಸ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಸೈಕಲ್ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಮಲ್ಲೇಶ್ ಗೂರೂಜಿ, ಧನಂಜಯ, ಪಿ.ಸಂದರ್ಶ, ಹರೀಶ್ ಬಾಬು, ವಿನೋದ್‌ಬಾಬು, ದಾಸೇಗೌಡ, ನಾಗೇಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಾಲಕರಿಗೆ ಶಾಸಕ ಕೆ.ಎಂ.ಉದಯ್ ಮನವಿ
  • ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಮದ್ದೂರು: ಇತ್ತೀಚಿಗೆ ಇಂಗ್ಲಿಷ್ ವ್ಯಾಮೋಹದಿಂದ ಪಾಲಕರು ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುತ್ತಿಲ್ಲ. ಇದರಿಂದ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತಿದ್ದು, ಶಾಲೆಗಳ ಉಳಿವಿಗಾಗಿ ಪಾಲಕರು ಸ್ವಯಂಪ್ರೇರಿತವಾಗಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ಕೆಸ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸೈಕಲ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇದಿಕೆಯಲ್ಲಿರುವ ಬಹುತೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದವರೇ. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣ ನೀಡುತ್ತಿವೆ. ಆದ್ದರಿಂದ ಸರ್ಕಾರಿ ಶಾಲೆಗಳ ಉಳಿವಿಗಾಗಿ ನಾವೇ ಮಾದರಿಯಾಗಿ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ತಿಳಿಸಿದರು.
ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕೆಲ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯನ್ನು ಬದಲಿಸಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಗೌಡಗೆರೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮಲ್ಲೇಶ್ ಗುರೂಜಿ ಮಾತನಾಡಿ, ಎಷ್ಟೇ ದೊಡ್ಡ ವ್ಯಕ್ತಿಯಾದರೂ ತಲೆ ತಗ್ಗಿಸಿ ಊಟ ಮಾಡಲೇಬೇಕು. ಅದೇ ರೀತಿ ಯಾರೂ ಕದಿಯಲಾಗದ ಎರಡು ಅಮೂಲ್ಯ ಸಂಪತ್ತುಗಳೆಂದರೆ ವಿದ್ಯೆ ಮತ್ತು ಮಾತೃ ವಾತ್ಸಲ್ಯ. ಇವುಗಳನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಹಳ್ಳಿಯ ವಿದ್ಯಾರ್ಥಿಗಳು ತಮ್ಮ ಕುಟುಂಬದವರು ಹಾಗೂ ನೆರೆಹೊರೆಯವರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಬೈಸಿಕಲ್ ವಿತರಣೆ ಮುಂದುವರಿಸುವ ಪ್ರಯತ್ನ ಮಾಡುವುದಾಗಿ ಹಳೆಯ ವಿದ್ಯಾರ್ಥಿಗಳ ಸಂಘದ ಮುಖ್ಯಸ್ಥ ವಿನೋದ್ ಬಾಬು ತಿಳಿಸಿದರು.
ನಿವೃತ್ತ ಮುಖ್ಯ ಶಿಕ್ಷಕ ಕೆ.ಆರ್.ಕೃಷ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪುಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್ ಪಿ., ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಎಪಿಎಂಸಿ ಮಾಜಿ ಅಧ್ಯಕ್ಷ ಕೆಸ್ತೂರು ದಾಸೇಗೌಡ, ಮುಖಂಡರಾದ ಟಿ.ಲಿಂಗೇಗೌಡ, ಶಂಕರ್, ಬಿಇಒ ಧನಂಜಯ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಗೌಡ, ಹಳೇಯ ವಿದ್ಯಾರ್ಥಿಗಳಾದ ವಿನೋದ್ ಬಾಬು, ವಿನೋದ್, ನಾಗಸಂದ್ರ ಶ್ರೀನಿವಾಸ್, ಯೋಗೇಶ್, ಮೋಹನ್, ವೆಂಕಟೇಶ್, ಲೋಕೇಶ್, ಸಂಜಯ್, ಚೇತನ್, ಆನಂದ್ ಕುಮಾರಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net