ಸೆ.11ರಂದು ನಗರದಲ್ಲಿ ಶಿಕ್ಷಕರ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ಮಂಡ್ಯ:

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೆ.11ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸ್ಥಳ, ವೇದಿಕೆ ವ್ಯವಸ್ಥೆ, ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ, ಆಹ್ವಾನಿತರು, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿವಿಧ ಇಲಾಖೆಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಬೇಕು ಎಂದರು.
ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರ ಜತೆಗೆ ಉತ್ತಮ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಆದ್ದರಿಂದ ಶಿಕ್ಷಕರ ದಿನಾಚರಣೆಯು ಶಿಕ್ಷಕರ ಸೇವೆ, ಸಮರ್ಪಣೆ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗೌರವಿಸುವ ರೀತಿಯಲ್ಲಿ ನಡೆಯಬೇಕು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಕೊಡುಗೆ ನೀಡಿರುವ 24 ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸುವ ಕಾರ್ಯಕ್ರಮವನ್ನು ಗೌರವಯುತವಾಗಿ ಆಯೋಜಿಸಬೇಕು. ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ಕ್ರಮವಹಿಸಬೇಕು. ಅಂತೆಯೇ ತಾಲೂಕು ಮಟ್ಟದಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ವಿಶೇಷವಾಗಿ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ 117 ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಗುವುದು. ಅಲ್ಲದೆ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ 400 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ವಿವರಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಶಿಕ್ಷಕರ ಉತ್ತಮ ಕಾರ್ಯವೈಖರಿ, ನವೀನ ಬೋಧನಾ ವಿಧಾನಗಳು ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ದಿನಾಚರಣೆಯ ಪ್ರಮುಖ ಉದ್ದೇಶವಾಗಿರಬೇಕು ಎಂದು ಹೇಳಿದರು.
ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲ ಉಂಟಾಗದಂತೆ ಎಲ್ಲ ಸಿದ್ಧತೆಗಳನ್ನು ಮುಂಚಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಬಸವರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್, ಬಿಇಒ ಮಹದೇವ್, ಜಿಲ್ಲಾ ವಾರ್ತಾಧಿಕಾರಿ ಟಿ.ಕೆ.ಹರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net