ಫೆ.6ರಂದು ನಗರದಲ್ಲಿ ತರಬೇತಿ ಕಾರ್ಯಾಗಾರ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲ್ಯ ವಿವಾಹ ಮುಕ್ತ ಸಂಕಲ್ಪ ಅಭಿಯಾನ
  • ನಗರದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
  • ಡಿಸಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಮಂಡ್ಯ: ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನ ಅಂಗವಾಗಿ ಫೆ.6ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಸಂಕಲ್ಪ ಅಭಿಯಾನದ ಅಂಗವಾಗಿ ಮಕ್ಕಳ ಸಂರಕ್ಷಣೆ ಮತ್ತು ಕಾನೂನಿನ ಕುರಿತಾಗಿ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಮತ್ತು ಪ್ರಾಧ್ಯಾಪಕರು, ಖಾಸಗಿ ಶಾಲೆಗಳ ವಾಹನ ಚಾಲಕರು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಿಡಿಒ ಸೇರಿದಂತೆ ಒಂದೂವರೆಯಿಂದ ಎರಡು ಸಾವಿರ ಜನರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆಯ ಕುರಿತಾಗಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ರಾಜ್ಯ ಬಾಲ ನ್ಯಾಯ ಮಂಡಳಿಯ ಸಮಿತಿ ಅಧ್ಯಕ್ಷರು ಹಾಗೂ ನ್ಯಾಯಾಧೀಶರು ಭಾಗಿಯಾಗಲಿದ್ದಾರೆ. ವಿವಿಧ ಇಲಾಖೆಗಳಿಂದ ಮಕ್ಕಳಿಗೆ ಸಂಬಂಧಿಸಿದ 10 ಮಳಿಗೆ ತೆರೆಯಲಾಗುವುದು. ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಭಾಗವಹಿಸಬೇಕು. ಜವಾಬ್ದಾರಿ ವಹಿಸಿರುವ ಇಲಾಖೆಗಳು ಸಮನ್ವಯ ಸಾಧಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್, ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net