ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯದಲ್ಲಿ ಆಯೋಜಿಸಿದ್ದ ಏಕೀಕೃತ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಏಕೀಕೃತ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಏಕೀಕೃತ ಸಮಿತಿ ಸಭೆ
  • ಬಾಲ್ಯ ವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಿ
  • ಶಾಲಾ ಹಂತದಲ್ಲಿ ಹೆಣ್ಣು ಮಕ್ಕಳು ಗೈರು ಹಾಜರು ವಿವರ ಪರಿಶೀಲಿಸಿ
ಮಂಡ್ಯ: ಅಂಗನವಾಡಿಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಬೇಕು. ಮಾತ್ರವಲ್ಲದೆ ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಯುತ್ತಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಏಕೀಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಬಹುಮುಖ್ಯವಾಗಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.
ಸಖಿ ಒನ್ ಸ್ಟಾಪ್ ಸೆಂಟರ್‌ಗೆ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ವರದಿಯನ್ನು ಒಂದು ವಾರದೊಳಗೆ ನೀಡಬೇಕು. ಅಂತೆಯೇ ಸೆಂಟರ್‌ಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಮತ್ತು ತಡೆಗಟ್ಟುವ ಸಂಬಂಧ ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮಾಡಬೇಕು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ನಿಷೇಧ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು ಹೇಳಿದರು.
ಕೌಟುಂಬಿಕ ದೌರ್ಜನ್ಯ ಕೊಳಗಾದ ಮಹಿಳೆಯರು ಮತ್ತು ಪರಿತ್ಯಕ್ತ ಮಹಿಳೆಯರು ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಒಳಪಟ್ಟ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಬೇಕು. ಜತೆಗೆ ಕಾನೂನಿನ ನೆರವು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಸಾಂತ್ವನ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. 2025-26ನೇ ಸಾಲಿನಲ್ಲಿ ಸಾಂತ್ವನ ಕೇಂದ್ರಗಳಲ್ಲಿ 565 ಪ್ರಕರಣ ದಾಖಲಾಗಿದ್ದು, ಈ ಪೈಕಿ 537 ಪ್ರಕರಣಗಳು ಇತ್ಯರ್ಥಗೊಂಡಿದೆ. ಅದರಂತೆ ಉಳಿದ 28 ಪ್ರಕರಣವನ್ನು ಶೀಘ್ರವೇ ಇತ್ಯರ್ಥ ಮಾಡಬೇಕು. ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಅರಿವು ಮೂಡಿಸಿ. ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮ ಮಾಡಬೇಕು ಎಂದು ಸೂಚನೆ ನೀಡಿದರು.
ಮಿಷನ್ ಶಕ್ತಿ ಯೋಜನೆಯು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಮಾಡಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಸೇವೆ, ಕಾನೂನು ಸೇವೆ, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ನೀಡಿ ಆಪ್ತ ಸಮಾಲೋಚನೆ ಮಾಡಬೇಕು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿಯ ಉತ್ತೇಜಿಸಬೇಕು. ಕುಸಿಯುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಉತ್ತಮಪಡಿಸುವುದು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸಬೇಕು ಎಂದು ಹೇಳಿದರು.
2025-26ನೇ ಸಾಲಿನಲ್ಲಿ ಮಹಿಳಾ ಸಬಲೀಕರಣ ಘಟಕದಿಂದ ಜಿಲ್ಲಾದ್ಯಂತ 73 ಕಾರ್ಯಕ್ರಮ ಮಾಡಲಾಗಿದೆ. ಶಾಲಾ ಕಾಲೇಜು, ವಸತಿ ನಿಲಯ ವಿದ್ಯಾರ್ಥಿಗಳಿಗೆ 33 ಮತ್ತು ಶಿಕ್ಷಕರು, ಅಂಗನವಾಡಿ ಕಾರ್ಯಕತೆರ್ಯರು, ಸ್ವಸಹಾಯ ಸಂಘದ ಸದಸ್ಯರು, ಹಾಗೂ ಸಾರ್ವಜನಿಕರಿಗೆ 34 ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಕ್ತಿ ಸದನ(ಸಸ್ವಾಧಾರ ಗೃಹ )ಮತ್ತು ಉಜ್ವಲ ಕೇಂದ್ರಗಳಲ್ಲಿ ಸಂಕಷ್ಟಕ್ಕೆ ಒಳಗಾದ ಮಹಿಳೆಯರು ಮತ್ತು ವಿಧವೆಯರು, ದೌರ್ಜನ್ಯಕ್ಕೊಳದ ಮಹಿಳೆಯರು, ನಿರ್ಗತಿಕ ಹೆಣ್ಣು ಮಕ್ಕಳಿಗೆ ಉಚಿತವಾಗಿ ಊಟ, ವಸತಿ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ವೈದ್ಯಕೀಯ ಸೌಲಭ್ಯ ಮತ್ತು ಪುನರ್ವಸತಿ ಪೂರಕವಾಗಿ ವೃತ್ತಿ ತರಬೇತಿ ನೀಡುವುದರ ಜೊತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಮಾತನಾಡಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಾಂತ್ವನ ನೀಡಿ ತಮ್ಮ ಹಂತದಲ್ಲಿ ಸಭೆ ನಡೆಸಿ ನಂತರದಲ್ಲಿ ನ್ಯಾಯಾಲಯದ ಗಮನಕ್ಕೆ ತರಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣ ಹೆಚ್ಚು ಇರುವುದರಿಂದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳು ಮತ್ತು ಆಹಾರ ಪೌಷ್ಟಿಕತೆಯನ್ನು ಅಧಿಕಾರಿಗಳು ಪರಿಶೀಲಿಸಬೇಕು. ಮತ್ತು ತಿಂಗಳಿಗೊಮ್ಮೆ ವಿವರಗಳನ್ನು ನೀಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಆಶಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net