ಕ್ರೀಡೆ ಉತ್ತೇಜನಕ್ಕೆ ಸುಸಜ್ಜಿತ ಮೈದಾನ ನಿರ್ಮಾಣ: ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿಕೆ

ಮಂಡ್ಯ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು.
ಮಂಡ್ಯ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಾಲಿಬಾಲ್ ಕ್ರೀಡಾಂಗಣ ಕಾಮಗಾರಿಗೆ ಚಾಲನೆ

ಮಂಡ್ಯ:

ನಗರದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗಾಗಿ ಈವರೆಗೆ ಅಂದಾಜು 10 ಕೋಟಿ ರೂ. ಅನುದಾನ ವಿನಿಯೋಗಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.

ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ 59 ಲಕ್ಷ ರೂ. ವೆಚ್ಚದಲ್ಲಿ ವಾಲಿಬಾಲ್ ಹಾಗೂ ಇತರ ಕ್ರೀಡಾಂಗಣಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಅನುದಾನ ಬಳಸಿಕೊಂಡು ವಿವಿಧ ಕ್ರೀಡೆಗಳಿಗೆ ಅಗತ್ಯವಾದ ಸುಸಜ್ಜಿತ ಮೈದಾನ, ತರಬೇತಿ ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕ್ರೀಡಾ ವಿದ್ಯಾರ್ಥಿಗಳು ಉತ್ತಮ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ವಾಲಿಬಾಲ್ ಕ್ರೀಡಾಂಗಣವನ್ನು ಅನುಭವಿ ಗುತ್ತಿಗೆದಾರರಿಂದ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತವಾಗಿ ಕೈಗೊಂಡು ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕ್ರೀಡಾಂಗಣ ಪೂರ್ಣಗೊಂಡ ಬಳಿಕ ಕ್ರೀಡಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಅನುಕೂಲವಾಗಲಿದೆ. ಅಲ್ಲದೆ, ವಾಲಿಬಾಲ್ ಟೂರ್ನಮೆಂಟ್ ಆಯೋಜಿಸುವ ಮೂಲಕ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.
ಮಂಡ್ಯ ನಗರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳು ಸಂಬಂಧಪಟ್ಟ ಸಚಿವರ ದಿನಾಂಕ ನಿಗದಿಯಾದ ನಂತರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಇದರ ಮೂಲಕ ಮಂಡ್ಯ ನಗರದ ಕ್ರೀಡಾಪಟುಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ಸಿದ್ಧತೆ ನಡೆಸಲು ಅಗತ್ಯವಾದ ಮೂಲಸೌಕರ್ಯ ದೊರೆಯಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಫ್ಲಡ್‌ಲೈಟ್ ಅಳವಡಿಸಲು 3 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ವಹಿಸಲಾಗುವುದು. ಫ್ಲಡ್‌ಲೈಟ್ ವ್ಯವಸ್ಥೆ ಅಳವಡಿಕೆಯಾದರೆ ಹಗಲು ಸಮಯಕ್ಕೆ ಮಾತ್ರ ಸೀಮಿತವಾಗಿದ್ದ ಕ್ರೀಡಾ ಚಟುವಟಿಕೆಯನ್ನು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿಯೂ ನಡೆಸಲು ಸಾಧ್ಯವಾಗಲಿದೆ. ಇದರಿಂದ ಕ್ರೀಡಾಪಟುಗಳು ಹಾಗೂ ವಿವಿಧ ಕ್ರೀಡಾ ಸಂಘಟನೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಮಂಡ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕ್ರೀಡಾಪಟುಗಳ ಬಳಕೆಗೆ ಲೋಕಾರ್ಪಣೆ ಮಾಡುವ ಉದ್ದೇಶ ಹೊಂದಲಾಗಿದೆ. ಮಂಡ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣಕ್ಕೆ ಕಲ್ಲಹಳ್ಳಿಯಲ್ಲಿ ಜಾಗವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಡೆದುಕೊಂಡು ಒಂದು ವರ್ಷ ಕಳೆದಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸಿದ ರವಿಕುಮಾರ್ ಗಣಿಗ, ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಯಾವುದೇ ಕೊರತೆಯಿಲ್ಲ. ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ ಜಾಗವನ್ನು ನೀಡಿದ ನಂತರವೂ ಕಾಮಗಾರಿ ಆರಂಭವಾಗದಿರುವುದರಿಂದ ಸ್ಥಳೀಯ ಜನರಲ್ಲಿ ತಪ್ಪು ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ಈವರೆಗೆ ತಾಳ್ಮೆಯಿಂದ ಇದ್ದೇನೆ. ಇನ್ನೂ ಎರಡು ತಿಂಗಳೊಳಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಖೇಲೋ ಇಂಡಿಯಾ ಕ್ರೀಡಾಂಗಣದ ಕಾಮಗಾರಿಯನ್ನು ಆರಂಭಿಸದಿದ್ದರೆ, ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರದಿಂದಲೇ ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಂಡ್ಯ ನಗರದಲ್ಲಿ ಒಂದೆಡೆ ರಸ್ತೆ, ಚರಂಡಿ, ಉದ್ಯಾನವನ ಹಾಗೂ ಬೀದಿ ವ್ಯಾಪಾರಿಗಳಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವ ಮೂಲಕ ನಗರ ಮೂಲಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದ್ದರೆ, ಮತ್ತೊಂದೆಡೆ ಕ್ರೀಡಾ ಕ್ಷೇತ್ರಕ್ಕೆ ಭಾರಿ ಪ್ರಮಾಣದ ಅನುದಾನ ಒದಗಿಸಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಮಂಡ್ಯ ನಗರವು ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾ ಮೂಲಸೌಕರ್ಯ ಹೊಂದಿದ ನಗರವಾಗಿ ರೂಪುಗೊಳ್ಳುವ ನಿರೀಕ್ಷೆ ಮೂಡಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ಗುರು, ಅಭಿಲಾಷ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸೋಮಶೇಖರ್ ಕೆರಗೋಡು, ಹರೀಶ್, ಮಹೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net