ಗುಣಮಟ್ಟದ ನೀರಿನ ಪೂರೈಕೆಯಾಗಬೇಕು: ಜಿ.ಪಂ ಸಿಇಒ ಕೆ.ಆರ್.ನಂದಿನಿ ಸೂಚನೆ

ಮಂಡ್ಯದಲ್ಲಿ ಆಯೋಜಿಸಿದ್ದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ
  • ನಗರದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ
ಮಂಡ್ಯ: ಜಿಲ್ಲೆಯ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನಿಯಮಾನುಸಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸೂಚಿಸಿದರು.
ನಗರದ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದ್ಯತೆ ಹಾಗೂ ಅವಶ್ಯಕತೆಯ ಆಧಾರದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿ ತೆಗೆದುಕೊಂಡು ಸಾರ್ವಜನಿಕರಿಗೆ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಬೇಕು ಎಂದರು.
ಯಾವುದೇ ಗ್ರಾಮದಲ್ಲಿ ನೀರಿನ ಗುಣಮಟ್ಟದ ಹಾಗೂ ಪ್ರಮಾಣದಲ್ಲಾಗಲಿ ವ್ಯತ್ಯಾಸವಾಗಬಾರದು. ಕಟ್ಟ ಕಡೆಯ ವ್ಯಕ್ತಿಗೂ ನಿಗದಿತ ಪ್ರಮಾಣದ ನೀರು ಲಭ್ಯವಾಗುವಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿರುವ ಗ್ರಾಮಗಳಲ್ಲಿ ಸಮಸ್ಯೆಯ ಸ್ವರೂಪ, ಸಮಸ್ಯೆ ಪರಿಹರಿಸಲು ತೆಗೆದುಕೊಳ್ಳಬಹುದಾದ ಕ್ರಮ ಹಾಗೂ ತಗಲುವ ವೆಚ್ಚದ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಲು ಸೂಚಿಸಿದರು.
ಗ್ರಾಮಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗಿರುವ ಪ್ರದೇಶಗಳನ್ನು ಗುರುತಿಸಿ, ಹೊಸ ಬೋರ್‌ವೆಲ್ ಕೊರೆಸುವುದು, ಕೆಟ್ಟು ನಿಂತಿರುವ ಮೋಟಾರ್ ಮತ್ತು ಪಂಪ್‌ಸೆಟ್‌ಗಳನ್ನು ದುರಸ್ತಿಗೊಳಿಸುವುದು. ಅಗತ್ಯವಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು. ತಾತ್ಕಾಲಿಕ ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ತುರ್ತು ಕ್ರಮಗಳನ್ನು ತಕ್ಷಣ ಜಾರಿಗೊಳಿಸಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರು ಮತ್ತು ಮನವಿಗಳನ್ನು ತಕ್ಷಣ ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಹಾಯವಾಣಿ ತೆರೆಯಲಾಗಿದೆ. ಸ್ವೀಕೃತವಾದ ದೂರುಗಳು ಮತ್ತು ಅವುಗಳಿಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಪ್ರತೀ ವಾರ ಮಾಹಿತಿ ಸಲ್ಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ತಾಲೂಕುವಾರು ಪರಿಶೀಲನೆ ನಡೆಸಿ. ಮನೆಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ವಿಳಂಬವಾಗುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಿಇಒ, ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ಹಾಗೂ ಸುರಕ್ಷಿತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ನೀರಿನ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಎಫ್.ಟಿ.ಕೆ ಮೂಲಕ ಗ್ರಾಮ ಮಟ್ಟದಲ್ಲಿ ನೀರಿನ ಪರೀಕ್ಷೆ ನಡೆಸುವ ವಿಶೇಷ ಅಭಿಯಾನವನ್ನು ಜೂ 10ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಸಹಕಾರದೊಂದಿಗೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ವಿವಿಧ ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ, ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಪೈಪ್‌ಲೈನ್ ದುರಸ್ತಿ, ವಿದ್ಯುತ್ ಸಮಸ್ಯೆಗಳಿಂದ ನೀರು ಸರಬರಾಜಿನಲ್ಲಿ ಉಂಟಾಗುತ್ತಿರುವ ವ್ಯತ್ಯಯ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯವಿರುವ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಕಾರ್ಯಪಾಲಕ ಇಂಜಿನಿಯರ್ ಎನ್.ಜಿ.ಪ್ರಮೋದ್‌ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ರಶ್ಮಿ, ಮಧುಸೂದನ್, ರಂಗಸ್ವಾಮಿ, ಗಣೇಶ್ ಹೆಗಡೆ, ಗಿರಿಜೇಶ್, ಮಮತಾ, ಸೌಮ್ಯಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net