ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಶ್ರಮಿಸಿ

ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮನವಿ ಸಲ್ಲಿಸಿದರು.
ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮನವಿ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಂಎಲ್‌ಸಿ ಮಧು ಜಿ.ಮಾದೇಗೌಡಗೆ ವಿ.ಸಿ.ಉಮಾಶಂಕರ್ ಮನವಿ
ಕೆ.ಎಂ.ದೊಡ್ಡಿ: ರಾಜ್ಯದಲ್ಲಿ ಪದವೀಧರರ ಸಂಖ್ಯೆ ಹೆಚ್ಚಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಖಾಲಿ ಹುದ್ದೆಗಳ ಭರ್ತಿಗೆ ಒತ್ತಡ ಹಾಕುವಂತೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಸಲ್ಲಿಸಿದರು.
ಪಟ್ಟಣದ ಹನುಮಂತನಗರದಲ್ಲಿ ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ನಾಡಿನಲ್ಲಿ ದಿನೇ ದಿನೆ ಪದವೀಧರರ ಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಸಮಸ್ಯೆ ಎದುರಾಗುತ್ತಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು. ವೇತನ ತಾರತಮ್ಯ ಸರಿಪಡಿಸಿ ಪದವಿ ಶಿಕ್ಷಣ ಕಾಲೇಜುಗಳನ್ನು ಉನ್ನತಿಕರಣಗೊಳಿಸಿ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸಹಕರಿಸಬೇಕು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಆಗ್ರಹಿಸಿದರು.
ಗ್ರಾಮಂತರ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಭಾರತಿ ವಿದ್ಯಾ ಸಂಸ್ಥೆ ಅನೇಕ ಕುಟುಂಬಗಳು ಬದುಕು ಕಟ್ಟಿಕೊಳ್ಳಲು ನೆರವಾಗಿದೆ ಎಂದು ಶ್ಲಾಘಿಸಿದರು.
ಹಿರಿಯರಾದ ಜಿ.ಮಾದೇಗೌಡರು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿ ಮತ್ತು ರೈತ ಹೋರಾಟಗಾರರಾಗಿ ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ವಿಶ್ವವಿದ್ಯಾನಿಲಯಗಳನ್ನು ಮೀರಿಸುವಂತಹ ಶೈಕ್ಷಣಿಕ ಸಾಧನೆ ಮಾಡಿದ್ದಾರೆ ಎಂದರು.
ಮನವಿ ಸ್ವೀಕರಿಸಿದ ಎಂಎಲ್‌ಸಿ ಮಧು ಜಿ.ಮಾದೇಗೌಡ ಮಾತನಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆ, ಪದವೀಧರರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸದನದ ಒಳಗೆ, ಹೊರಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೋರಾಟ ಮಾಡುತ್ತಿದ್ದೇನೆ ಎಂದರು.
ಸದನದಲ್ಲಿ ಸಿಎಂ ಸೇರಿದಂತೆ ಸಚಿವರ ಗಮನ ಸೆಳೆದು ನಿರುದ್ಯೋಗ ಪದವೀಧರರ ಸಮಸ್ಯೆಗಳ ಕುರಿತು ಮಾತನಾಡಿದ್ದೇನೆ. ಶಿಕ್ಷಕರ ಪರ ಧ್ವನಿ ಎತ್ತಿ ಅವರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಿರುದ್ಯೋಗ ಪದವೀಧರರಿಗೆ ಉದ್ಯೋಗ ಕಲ್ಪಿಸುವುದು, ಅತಿಥಿ ಉಪನ್ಯಾಸಕರ ಖಾಯಂ ಸೇರಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸಂಘಟನಾ ಕಾರ್ಯದರ್ಶಿ ಎಸ್.ಎಲ್.ಉಮೇಶ್, ಉಪನ್ಯಾಸಕ ಅಜ್ಜಹಳ್ಳಿ ಸಿದ್ದಾರ್ಥ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net